ಬೆಂಗಳೂರು: ಫೇಸ್ಬುಕ್ನಲ್ಲಿ ಅವಹೇಳನಕಾರಿ ಬರಹದಿಂದ ನಿನ್ನೆ ರಾತ್ರಿ ನಡೆದ ಗಲಭೆ ಹಾಗೂ ಗೋಲಿಬಾರ್ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಭೆ ಕರೆದಿದ್ದಾರೆ.
ಉಡುಪಿಯಲ್ಲಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಲಿದ್ದು, ಸಿಎಂ ನಿವಾಸ ಕಾವೇರಿಯಲ್ಲಿ ಸಂಜೆ ಸಭೆ ಕರೆಯಲಾಗಿದೆ ಎಂದು ತಿಳಿದು ಬಂದಿದೆ.
ಸಿಎಂ ನಿವಾಸದಲ್ಲಿ ನಡೆಯಲಿರುವ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ.
ರಾತ್ರಿ ನಡೆದ ಗಲಾಟೆ, ಹಿಂಸಾಚಾರ ಪೂರ್ವನಿಯೋಜಿತ ಎನ್ನಲಾಗುತ್ತಿದೆ. ಈ ಪ್ರಕರಣದಲ್ಲಿ ಷಡ್ಯಂತ್ರ ಇರುವ ಬಗ್ಗೆ ತನಿಖೆ ನಡೆಸುತ್ತಿದ್ದು, ಮತ್ತಷ್ಟು ಮಾಹಿತಿ ಸಂಗ್ರಹಿಸಬೇಕಿರುವ ಕಾರಣ ಇದರ ತನಿಖೆಯನ್ನು ಸಿಐಡಿ ಅಥವಾ ಎಸ್ಐಟಿಗೆ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಪ್ರಕರಣದ ಕುರಿತು ಸಿಎಂ ಇಂದು ಸಭೆ ನಡೆಸಿದ ನಂತರ ನಿರ್ಧಾರ ಪ್ರಕಟಿಸಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿ: ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಿಎಂ ಯಡಿಯೂರಪ್ಪ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಂದ ಘಟನಾ ಸ್ಥಳದ ಕುರಿತು ಕ್ಷಣ ಕ್ಣಣ ಮಾಹಿತಿ ಪಡೆಯುತ್ತಿದ್ದಾರೆ. ಪರಿಸ್ಥಿತಿ ಸಂಪೂರ್ಣ ತಹಬದಿಗೆ ಬಂದಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಡಿ.ಜೆ ಹಳ್ಳಿ ವ್ಯಾಪ್ತಿಯ ಧಾರ್ಮಿಕ ಮುಖಂಡರ ಜೊತೆ ಸಭೆ ನಡೆಸಿದ್ದಾರೆ.