ಬೆಂಗಳೂರು: ಇನ್‌ಫೆಂಟ್ರಿ ರಸ್ತೆಯಲ್ಲಿರುವ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 10ಕ್ಕಿಂತ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಅಂಟಿದ ಹಿನ್ನೆಲೆಯಲ್ಲಿ 2ನೇ ಬಾರಿಗೆ ಆಯುಕ್ತರ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
10 ದಿನಗಳ ಹಿಂದೆ ಸಿಬ್ಬಂದಿಗೆ ಸೋಂಕು ಕಂಡು ಬಂದಿದ್ದರಿಂದ ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿತ್ತು. ಇದಾದ ಬಳಿಕ ಮುಂಜಾಗ್ರತಾ ಕ್ರಮವಾಗಿ ಮತ್ತೆ ಕಚೇರಿ ಸಿಬ್ಬಂದಿಗೆ ಗಂಟಲು ದ್ರವ ಪರೀಕ್ಷೆ ಮಾಡಿಸಿದಾಗ 10ಕ್ಕಿಂತ ಹೆಚ್ಚು ಪೊಲೀಸರಿಗೆ ಕೊರೊನಾ ಇರುವುದು ದೃಢಪಟ್ಟಿದೆ.
ಸೋಂಕಿತರೆಲ್ಲರನ್ನೂ ಕ್ವಾರಂಟೈನ್ಗೆ ಒಳಪಡಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕಚೇರಿಯನ್ನು ಸ್ಯಾನಿಟೈಸ್ ಮಾಡಲು ಇಂದಿನಿಂದ ಜುಲೈ 14ರವರೆಗೆ ಕಚೇರಿ ಸೀಲ್ ಡೌನ್ ಮಾಡಲಾಗಿದೆ.
ಈ ಅವಧಿಯಲ್ಲಿ ಕಂಟ್ರೋಲ್ ರೂಮ್ ಹಾಗೂ ಕಮಾಂಡ್ ಸೆಂಟರ್ನಲ್ಲಿ ನಿಯಮಿತ ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸಲಿದ್ದಾರೆ ಎಂದು ನಗರ ಪೊಲೀಸ್ ಇಲಾಖೆಯ ಆಡಳಿತ ವಿಭಾಗದ ಅಪರ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ.