ಬೆಂಗಳೂರು: ಬೆಂಗಳೂರಲ್ಲಿ ನಿನ್ನೆ ಭಾರಿ ಮಳೆ ಸುರಿದು ಅವಾಂತರ ಸೃಷ್ಟಿಯಾದ ಹಿನ್ನೆಲೆ ಸಿಎಂ ಯಡಿಯೂರಪ್ಪ ಬಿಬಿಎಂಪಿ ಅಧಿಕಾರಿಗಳೊಂದಿಗೆ ಇಂದು ತುರ್ತು ಸಭೆ ನಡೆಸಿದರು.
ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮಳೆಹಾನಿಯ ಬಗ್ಗೆ ಮಾಹಿತಿ ಪಡೆದರು. ಮಳೆಯಿಂದ ನಗರದ ಯಾವ ಪ್ರದೇಶಗಳಲ್ಲಿ ಹಾನಿಯಾಗಿದೆ. ಹಾನಿಯ ಪ್ರಮಾಣ ಎಷ್ಟು?. ಪರಿಹಾರ ಕಾರ್ಯ, ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.
ಇನ್ನೂ ಎರಡು ದಿನ ಬೆಂಗಳೂರಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕಟ್ಟೆಚ್ಚರದಿಂದ ಇರುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು. ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳ ಬಗ್ಗೆ ಹೆಚ್ಚಿನ ನಿಗಾ ಇಡುವಂತೆ ಮತ್ತು ಯಾರಿಗೂ ಸಮಸ್ಯೆಯಾಗದಂತೆ ಕ್ರಮ ವಹಿಸಲು ಸೂಚಿಸಿದರು.
25 ಸಾವಿರ ರೂ. ಪರಿಹಾರ
ಸಭೆ ಬಳಿಕ ಮಾತನಾಡಿದ ಅವರು, ಮಳೆ ಹಾನಿ ಸಂಭವಿಸಿದ ಪ್ರತಿ ಕುಟುಂಬಕ್ಕೆ ತುರ್ತಾಗಿ 25 ಸಾವಿರ ರೂಪಾಯಿ ನೀಡಲಾಗುವುದು ಎಂದು ತಿಳಿಸಿದರು.
ಸಚಿವ ಆರ್.ಅಶೋಕ್ ಈಗಾಗಲೇ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಎಲ್ಲಾ ಮುಂಜಾಗ್ರತಾ ವ್ಯವಸ್ಥೆಯನ್ನು ಮಾಡಿದ್ದಾರೆ. ಈಗ ನಾನು ಮಳೆ ಹಾನಿ ಬಗ್ಗೆ ಪರಿಶೀಲನೆ ನಡೆಸಲಿದ್ದೇನೆ ಎಂದರು.
ಸಭೆಯಲ್ಲಿ ಸಚಿವ ಆರ್.ಅಶೋಕ್, ಸಿಎಂ ಅಪಾರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತಾ, ಆಯುಕ್ತ ಮಂಜುನಾಥ್ ಪ್ರಸಾದ್ ಭಾಗವಹಿಸಿದ್ದರು.