ಬೆಂಗಳೂರು: ಸರ್ವೆ ಮಾಡಲು ತೆರಳಿದ್ದ ವೇಳೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆಗೆ ಸಂಬಂಧಿಸಿದಂತೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸರ್ವೆ ಕಾರ್ಯಕ್ಕೆ ತೆರಳಿದ್ದ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ತಹಶೀಲ್ದಾರ್ ಚಂದ್ರಮೌಳೇಶ್ವರ್ ಅವರನ್ನು ಹತ್ಯೆ ಮಾಡಿರುವುದು ಆಘಾತಕಾರಿ ವಿಚಾರ. ಮೃತರ ಕುಟುಂಬಕ್ಕೆ ನನ್ನ ಸಂತಾಪ. ಈ ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ, ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದಿದ್ದಾರೆ.
ಜಮೀನು ಸರ್ವೆ ನಡೆಸುತ್ತಿದ್ದ ಸಂದರ್ಭದಲ್ಲಿ ನಡೆದ ಘರ್ಷಣೆಯಲ್ಲಿ ತಹಶೀಲ್ದಾರ್ಗೆ ಚಾಕುವಿನಿಂದ ಇರಿಯಲಾಗಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ದೊಡ್ಡ ಕಳವಂಚಿ ಗ್ರಾಮದ ವೆಂಕಟಪತಿ ಎಂಬುವರು ಕೃತ್ಯವೆಸಗಿದ್ದು,ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಕರ್ತವ್ಯನಿರತ ಬಂಗಾರಪೇಟೆ ತಹಶೀಲ್ದಾರ್ ಕೊಲೆ ಹಿನ್ನೆಲೆ ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಹಾಗೂ ಸರ್ಕಾರಿ ಉದ್ಯೋಗದ ಭರವಸೆಯನ್ನು ಸಿಎಂ ನೀಡಿದ್ದಾರೆ. ಇದೀಗ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಘಟನೆಯನ್ನು ಖಂಡಿಸಿ ಹತ್ಯೆ ನಡೆಸಿದವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ.