ಬೆಂಗಳೂರು: ಸತತ 7 ಬಾರಿ ವಿಧಾನ ಪರಿಷತ್ಗೆ ಆಯ್ಕೆಯಾಗಿ ಸೋಲಿಲ್ಲದ ಸರದಾರನಾಗಿರುವ ಸಭಾಪತಿ ಹಾಗೂ ಜೆಡಿಎಸ್ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿಂದು ಬಿಜೆಪಿ ಸೇರ್ಪಡೆಯಾದರು. ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ಭೇಟಿ ನೀಡಿದ ಹೊರಟ್ಟಿ, ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಆರ್.ಅಶೋಕ್, ಆರಗ ಜ್ಞಾನೇಂದ್ರ, ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಇದ್ದರು.
ಹಾವೇರಿ, ಧಾರವಾಡ, ಗದಗ, ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅಮಿತ್ ಶಾ ಒಪ್ಪಿಗೆ ನೀಡಿದ್ದು, ಹೊರಟ್ಟಿ ಅವರನ್ನು ಬಿಜೆಪಿಗೆ ಬರಮಾಡಿಕೊಳ್ಳಲಾಯಿತು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕದಲ್ಲಿ ಪ್ರಬಲವಾಗಿರುವ ಪಕ್ಷಕ್ಕೆ ಹೊರಟ್ಟಿ ಸೇರ್ಪಡೆ ಮತ್ತಷ್ಟು ಶಕ್ತಿ ತುಂಬಿದೆ ಎಂದರು.
ಹೆಚ್ಡಿಕೆ ಮನವೊಲಿಕೆ ವಿಫಲ: ಹೊರಟ್ಟಿ ಬಿಜೆಪಿಗೆ ಸೇರ್ಪಡೆಯಾಗುವ ವದಂತಿ ಹಿನ್ನೆಲೆಯಲ್ಲಿ ಖುದ್ದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾರ್ಚ್ 29 ರಂದು ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ಭೇಟಿ ನೀಡಿ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದ್ದರು. ಈ ಸಂದರ್ಭದಲ್ಲಿ ಹೊರಟ್ಟಿ ಬಿಜೆಪಿಗೆ ಸೇರ್ಪಡೆಯಾಗುವ ವದಂತಿ ಕುರಿತು ಕೂಡಾ ಮಾತುಕತೆ ನಡೆಸಿ, ಮನವೊಲಿಕೆ ಪ್ರಯತ್ನ ಕೂಡ ಮಾಡಿದ್ದರು. ಆದರೆ ಬಿಜೆಪಿ ಸೇರ್ಪಡೆ ಬಗ್ಗೆ ಆರು ತಿಂಗಳ ಹಿಂದೆಯೇ ನಿರ್ಧರಿಸಿದ್ದ ಹೊರಟ್ಟಿ, ಹೆಚ್ಡಿಕೆ ಮನವೊಲಿಕೆಗೆ ಒಪ್ಪದೆ ಇಂದು ಅಧಿಕೃತವಾಗಿ ಬಿಜೆಪಿ ಸೇರಿಕೊಂಡರು.
ವಿರೋಧಿಗಳಿಗೆ ಶಾಕ್: ಕ್ಷೇತ್ರ ವ್ಯಾಪ್ತಿಯ ಕೆಲ ಮುಖಂಡರು ಹೈಕಮಾಂಡ್‌ಗೆ ಪತ್ರ ಬರೆದು ಬಸವರಾಜ ಹೊರಟ್ಟಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಮನವಿ ಮಾಡಿದ್ದರು. ಈಗಾಗಲೇ ಅವರಿಗೆ 76 ವರ್ಷ ವಯಸ್ಸಾಗಿದೆ. 1980ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದರೂ 1999ರವರೆಗೆ ಲ್ಯಾಮಿಂಗ್ಟನ್ ಶಾಲೆಯಲ್ಲಿ ದೈಹಿಕ ಶಿಕ್ಷಕರ ಹುದ್ದೆ ಉಳಿಸಿಕೊಂಡು ವೇತನ ಪಡೆದಿದ್ದರು. ಹೀಗೆ ಒಟ್ಟಿಗೆ ಎರಡೆರಡು ವೇತನ ಪಡೆದಿದ್ದರು ಎಂಬ ಆರೋಪವಿದೆ.
ಹಾವೇರಿ, ಧಾರವಾಡ, ಗದಗ, ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ 17 ಶಾಸಕರು, ಮೂವರು ಸಂಸತ್ ಸದಸ್ಯರು, ಮೂವರು ಕ್ಯಾಬಿನೆಟ್ ಸಚಿವರು, ಓರ್ವ ಕೇಂದ್ರ ಸಚಿವರು, ರಾಜ್ಯದ ಹಾಲಿ ಮುಖ್ಯಮಂತ್ರಿ ಸಹ ಇದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಒಬ್ಬರೇ ಒಬ್ಬ ಶಾಸಕರು ಇಲ್ಲ. ಹಾಗಾಗಿ ಹೊರಟ್ಟಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಬಾರದು ಎಂದು ಬಿಜೆಪಿಯ ಕೆಲ ನಾಯಕರು ಹೈಕಮಾಂಡ್‌ಗೆ ಪತ್ರ ಬರೆದಿದ್ದರು.
ಇದನ್ನೂ ಓದಿ: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್; ಇಂದು ಸಮಾರೋಪ ಸಮಾರಂಭ