ಬೆಂಗಳೂರು: ವಿಧಾನಪರಿಷತ್ನ ಸಭಾಪತಿ ಸ್ಥಾನಕ್ಕೆ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರ ಹೆಸರು ಘೋಷಣೆ ಮಾಡಿದ ನಂತರ, ಇಂದು ಬೆಳಗ್ಗೆ ಅವರು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.
ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಆಗಮಿಸಿದ ಬಸವರಾಜ ಹೊರಟ್ಟಿ ಅವರು, ಹೂ ಗುಚ್ಛ ನೀಡಿ ಗೌಡರಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕೋನರೆಡ್ಡಿ ಉಪಸ್ಥಿತರಿದ್ದರು.
ಬಿಜೆಪಿ ಸಭಾಪತಿ ಸ್ಥಾನವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟ ಹಿನ್ನೆಲೆ ಪರಿಷತ್ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಸಭಾಪತಿ ಸ್ಥಾನ ಅಲಂಕರಿಸಲಿದ್ದಾರೆ. ಹೆಚ್ .ಡಿ. ದೇವೇಗೌಡ ನೇತೃತ್ವದಲ್ಲಿ ಮಂಗಳವಾರ ಪಕ್ಷದ ವಿಧಾನಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಲಾಯಿತು.
ಓದಿ: ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭ
ಸಭಾಪತಿ ಸ್ಥಾನದ ಆಕಾಂಕ್ಷಿಯಾಗಿರುವ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಅವರಿಗೆ ಹುದ್ದೆ ನೀಡುವ ಸಂಬಂಧ ಸಭೆಯಲ್ಲಿ ಸದಸ್ಯರು ಸರ್ವಾನುಮತದಿಂದ ಸಹಮತ ವ್ಯಕ್ತಪಡಿಸಿದ್ದಾರೆ. ಬಸವರಾಜ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡಲು ದೇವೇಗೌಡರು ಸಹ ಒಪ್ಪಿಗೆ ನೀಡಿದ್ದಾರೆ.