ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟಕ್ಕೆ ಮಹಾಮಾರಿ ಕೋವಿಡ್ ಬೆಂಬಿಡದೆ ಕಾಡುತ್ತಿದ್ದು, ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ನಿನ್ನೆಯಷ್ಟೇ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದು, ಸದ್ಯ ಕೊರೊನಾ ದೃಢಪಟ್ಟಿರುವುದರಿಂದ ಸಂಪುಟ ಸಹೋದ್ಯೋಗಿಗಳಿಗೆ, ಸಿಬ್ಬಂದಿ ವರ್ಗಕ್ಕೆ ಆತಂಕ ಶುರುವಾಗಿದೆ. ತಮಗೆ ಕೋವಿಡ್ ಪಾಸಿಟಿವ್ ವರದಿ ಬಂದಿರುವ ಮಾಹಿತಿಯನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ನಮ್ಮ ಮನೆಯಲ್ಲಿ ಕಾರ್ಯ ನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು, ನನಗೂ ಸಹ ಸೊಂಕು ತಗುಲಿರುವುದು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.