ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಸರ್ವೇಕ್ಷಣ್ ಅಭಿಯಾನ-2021ರ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇಂದು ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಸೈಕ್ಲೋಥಾನ್ ಆಯೋಜಿಸಲಾಗಿದ್ದು, ಬಿಬಿಎಂಪಿ ವಿಶೇಷ ಆಡಳಿತಾಧಿಕಾರಿ ಗೌರವ್ ಗುಪ್ತಾ ಚಾಲನೆ ನೀಡಿದರು.
ಸೈಕ್ಲೋಥಾನ್ ಅಭಿಯಾನವನ್ನು ಬಿಬಿಎಂಪಿ ಕೇಂದ್ರ ಕಚೇರಿಯಿಂದ ಆರಂಭಿಸಿ ಕಬ್ಬನ್ ಪಾರ್ಕ್, ಕಂಟ್ರಿ ಕ್ಲಬ್, ವಿಧಾನಸೌಧ, ಕಾಫಿ ಬೋರ್ಡ್, ಚಿನ್ನಸ್ವಾಮಿ ಸ್ಟೇಡಿಯಂ, ಯುಬಿ ಸಿಟಿ, ಮಲ್ಯ ಆಸ್ಪತ್ರೆ ಮೂಲಕ ಸಂಚರಿಸಿ ಪುನಃ ಪಾಲಿಕೆ ಕೇಂದ್ರ ಕಛೇರಿಗೆ ಮುಕ್ತಾಯ ಮಾಡಲಾಯಿತು. ಈ ವೇಳೆ ಮಾತನಾಡಿದ ಆಡಳಿತಾಧಿಕಾರಿ ಗೌರವ್ ಗುಪ್ತಾ, ನಗರದಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸಲು ಇಂದು ಸೈಕ್ಲೋಥಾನ್ ಹಮ್ಮಿಕೊಳ್ಳಲಾಗಿದೆ. ಸ್ವಚ್ಛ ಸರ್ವೇಕ್ಷಣ್ ಅಭಿಯಾನದಲ್ಲಿ ನಾಗರಿಕರ ಸಹಭಾಗಿತ್ವ ಪ್ರಮುಖ ಪಾತ್ರವಹಿಸಲಿದ್ದು, ಈ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳುವ ಮೂಲಕ ನಗರಕ್ಕೆ ಉತ್ತಮ ಅಂಕ ಬರಲು ಸಹಕರಿಸಬೇಕು ಎಂದು ಕರೆ ನೀಡಿದರು.
ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಾಲಿಕೆ, ಸ್ಮಾರ್ಟ್ ಸಿಟಿ ಹಾಗೂ ಡಲ್ಟ್ ವತಿಯಿಂದ ನಗರದಲ್ಲಿ ಸೈಕಲ್ ಲೈನ್ ನಿರ್ಮಿಸಲಾಗುತ್ತಿದೆ. ಜೊತೆಗೆ ಸುರಕ್ಷಿತ ಪಾದಚಾರಿ ಮಾರ್ಗ ನಿರ್ಮಿಸಲಾಗುತ್ತಿದ್ದು, ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.
ಈ ವೇಳೆ ವಿಶೇಷ ಆಯುಕ್ತರಾದ ಡಿ.ರಂದೀಪ್, ಜೆ.ಮಂಜುನಾಥ್, ಜಂಟಿ ಆಯುಕ್ತ ಸರ್ಫರಾಜ್ ಖಾನ್, ಮುಖ್ಯ ಇಂಜಿನಿಯರ್ ವಿಶ್ವನಾಥ್, ಅಧೀಕ್ಷಕ ಅಭಿಯಂತರರು ಹಾಗೂ ಇನ್ನಿತರೆ ಅಧಿಕಾರಿಗಳು ಸೈಕ್ಲೋಥಾನ್ನಲ್ಲಿ ಭಾಗವಹಿಸಿದ್ದರು.