ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಅಡಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನ ಮೇಯರ್ ಪರಾಮರ್ಶಿಸಿದರು. ಈ ಸಂಬಂಧ ಬಿಬಿಎಂಪಿ ಮೇಯರ್ ಅಧಿಕಾರಿಗಳ ಜೊತೆ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ನಗರ ಮಟ್ಟದ ಸಲಹಾ ವೇದಿಕೆ ಸಭೆ ನಡೆಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಅಡಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅವಶ್ಯಕ ಸಿಬ್ಬಂದಿ ನಿಯೋಜನೆ ಮಾಡಿಕೊಂಡು, ನಿಗದಿತ ಸಮಯದಲ್ಲಿ ಕಾಮಗಾರಿಗಳನ್ನ ಪೂರ್ಣಗೊಳಿಸುವಂತೆ ಮೇಯರ್ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಲ್ಲದೇ ಸ್ಮಾರ್ಟ್ ಸಿಟಿ ಯೋಜನೆಯಡಿ ಟೆಂಡರ್ ಶ್ಯೂರ್ ಮಾದರಿಯಲ್ಲಿ ಕೈಗೆತ್ತಿಕೊಂಡಿರುವ 36 ರಸ್ತೆಗಳ ಪೈಕಿ, ಸದ್ಯ ನಡೆಯುತ್ತಿರುವ ಕಾಮಗಾರಿಗಳ ಬಳಿ ಅವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು, ಸಮರ್ಪಕವಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಕೆ.ಆರ್.ಮಾರುಕಟ್ಟೆಯನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ತ್ವರಿತವಾಗಿ ಟೆಂಡರ್ ಕರೆದು ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಈ ವೇಳೆ, ಕೆ.ಆರ್ ಮಾರುಕಟ್ಟೆ ಜಂಕ್ಷನ್ ಅಭಿವೃದ್ಧಿಗೊಳಿಸುವ ಬಗ್ಗೆ ವಿಷಯ ಪ್ರಸ್ತಾಪಿಸಿದ ಬೆಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಮಾರುಕಟ್ಟೆ ಜಂಕ್ಷನ್ ಉನ್ನತ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಈಗಾಗಲೇ ಸ್ಥಳ ತನಿಖೆ ಮಾಡಿ ಸಮೀಕ್ಷೆ ನಡೆಸಿ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಈ ಪೈಕಿ ಬಿಎಂಟಿಸಿ ಬಸ್ ಸಂಚರಿಸುವ ಸ್ಥಳ, ಆಟೋ ನಿಲ್ದಾಣ, ಪಾದಚಾರಿ ಮಾರ್ಗ ಸೇರಿದಂತೆ ಖಾಲಿ ಜಾಗವನ್ನು ಅಭಿವೃದ್ಧಿಪಡಿಸುವ ವಿಷಯವಾಗಿ ಸಭೆಯಲ್ಲಿ ಚರ್ಚಿಸಲಾಗಿದೆ.
ಓದಿ: ಬೆಂಗಳೂರಲ್ಲಿ ನಿವೇಶನದಲ್ಲಿ ಸರ್ಕಾರಿ ದರ-ಮಾರುಕಟ್ಟೆ ದರ ನಡುವೆ ಭಾರಿ ವ್ಯತ್ಯಾಸ: ANAROCK ವರದಿ
ಈ ವೇಳೆ ಸಂಸದ ಪಿ.ಸಿ.ಮೋಹನ್, ಶಾಸಕ ದಿನೇಶ್ ಗುಂಡೂರಾವ್, ಬಿ.ಝೆಡ್.ಜಮೀರ್ ಅಹಮದ್ ಖಾನ್, ಶ್ರೀ ರಿಜ್ವಾನ್ ಹರ್ಷದ್, ಬೆಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಮುಖ್ಯ ಅಭಿಯಂತರರು(ಸ್ಮಾರ್ಟ್ ಸಿಟಿ) ಶ್ರೀನಿವಾಸ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.