ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ ಹೆಚ್ಚಿಸಲು ವಲಯವಾರು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಎಲ್ಲಾ ಸುಸ್ತಿದಾರರಿಗೆ ನೋಟಿಸ್ ಜಾರಿಗೊಳಿಸಿ ತಕ್ಷಣ ತೆರಿಗೆ ಸಂಗ್ರಹಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಕಂದಾಯ ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಕಚೇರಿಯಲ್ಲಿ ವರ್ಚುವಲ್ ಸಭೆ ನಡೆಸಿ ಮಾತನಾಡಿದ ಅವರು, ಕಂದಾಯ ಅಧಿಕಾರಿಗಳು, ಸಹಾಯ ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ಸಂಗ್ರಹಿಸುವ ಬಗ್ಗೆ ಹೆಚ್ಚು ಗಮನಹರಿಸಬೇಕು. ಈ ಸಂಬಂಧ ಆಯಾ ವಾರ್ಡ್ಗಳ ವ್ಯಾಪ್ತಿಯಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರಿಗೆ ನೋಟಿಸ್ ನೀಡಿ ತ್ವರಿತವಾಗಿ ತೆರಿಗೆ ಸಂಗ್ರಹಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಈ ಆರ್ಥಿಕ ವರ್ಷದಲ್ಲಿ 4,000 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ನಿನ್ನೆಯವರೆಗೆ 2,141 ಸಾವಿರ (ಶೇ.53 ರಷ್ಟು) ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹವಾಗಿದೆ. ಎಲ್ಲಾ ಅಧಿಕಾರಿಗಳು ಗುರಿ ತಲುಪಲು ಶ್ರಮವಹಿಸಿ ಕಾರ್ಯ ನಿರ್ವಹಿಸಬೇಕು. ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳ ಪಟ್ಟಿ ಅನ್ವಯ ಕಂದಾಯ ಅಧಿಕಾರಿಗಳು ತಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಅಧಿಕ ತೆರಿಗೆ ಬಾಕಿ ಉಳಿಸಿಕೊಂಡ ಸುಸ್ತಿದಾರರ ಪಟ್ಟಿಯ ಅನುಸಾರ ನೋಟಿಸ್ ಜಾರಿಗೊಳಿಸಿ ಬಾಕಿ ವಸೂಲಾತಿ ಮಾಡಬೇಕು ಎಂದರು.
ಸಭೆಯಲ್ಲಿ ವಿಶೇಷ ಆಯುಕ್ತರ ಎಸ್. ಬಸವರಾಜು, ಎಲ್ಲಾ ವಲಯ ಆಯುಕ್ತರುಗಳು, ಎಲ್ಲಾ ವಲಯ ಜಂಟಿ ಆಯುಕ್ತರುಗಳು, ಕಂದಾಯ ವಿಭಾಗದ ಉಪ ಆಯುಕ್ತರು, ಕಂದಾಯ ವಿಭಾಗದ ಜಂಟಿ ಆಯುಕ್ತರು, ಎಲ್ಲಾ ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು ಭಾಗಿಯಾಗಿದ್ದರು.
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆ, ಜವಳಿ & ಐಟಿ ಪಾರ್ಕ್ ಮರು ಆರಂಭ: ಸಿಎಂ ಭರವಸೆ