ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಪಾಲಿಕೆ ವ್ಯಾಪ್ತಿಯ ಮತದಾರರ ಅಂತಿಮ ಪಟ್ಟಿಯನ್ನು ಸಪ್ಟೆಂಬರ್ 29 ರಂದು ಪ್ರಕಟಿಸುವುದಾಗಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಬಿಬಿಎಂಪಿ ವಾರ್ಡ್ ವಾರು ಮೀಸಲಾತಿ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಅಧಿಸೂಚನೆ ರದ್ದು ಕೋರಿ ಈಜಿಪುರ ನಿವಾಸಿ ಕೆ.ಮಹದೇವ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಪೀಠಕ್ಕೆ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ ಎನ್ ಫಣೀಂದ್ರ ಈ ಮಾಹಿತಿ ನೀಡಿದರು.
ವಿಚಾರಣೆ ವೇಳೆ ಪಾಲಿಕೆ ವ್ಯಾಪ್ತಿಯ ಒಂದೇ ವಿಧಾನಸಭಾ ಕ್ಷೇತ್ರದ ಎಲ್ಲಾ ವಾರ್ಡ್ಗಳನ್ನು ಮಹಿಳೆಯರಿಗೆ ಮೀಸಲಿರಿಸಬಹುದೇ ಎಂದು ನ್ಯಾಯಪೀಠ ಸರ್ಕಾರಕ್ಕೆ ಪ್ರಶ್ನಿಸಿತು. ಅಲ್ಲದೆ, ಇಂತಹ ಮೀಸಲಾತಿ ನಿಗದಿ ಹಿಂದಿನ ತರ್ಕವೇನು ಎಂದು ಪ್ರಶ್ನಿಸಿತು. ಜತೆಗೆ, ಈ ಕುರಿತು ಮುಂದಿನ ವಿಚಾರಣೆ ವೇಳೆ ವಾದ ಮಂಡಿಸಲು ಸೂಚಿಸಿ ವಿಚಾರಣೆಯನ್ನು ಸಪ್ಟೆಂಬರ್ 27 ಕ್ಕೆ ಮುಂದೂಡಿತು.
ಇದನ್ನೂ ಓದಿ : ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್