ಬೆಂಗಳೂರು: ಹೊಸ ವಾಹನ ಖರೀದಿದಾರರು ಮನೆಯಲ್ಲೇ ಪಾರ್ಕಿಂಗ್ ಮಾಡುವ ಕುರಿತಾಗಿ ಕಮಿಟ್ಮೆಂಟ್ ಪತ್ರ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದರು.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಪಾರ್ಕಿಂಗ್ ನೀತಿಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆಯ ಬಳಿಕ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ತೀವ್ರವಾಗಿದೆ. ಆದರೆ ವ್ಯವಸ್ಥಿತ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ರಸ್ತೆಯಲ್ಲಿ ಪಾರ್ಕಿಂಗ್ ಮಾಡಬೇಕಾದ ಸ್ಥಿತಿ ಇದೆ. ಇದಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದರು.
ಹೀಗಾಗಿ ಆನ್ ರೋಡ್ ಪಾರ್ಕಿಂಗ್ಗೆ ಕಡಿವಾಣ ಹಾಕಲು ಕಠಿಣ ಕ್ರಮಕ್ಕೆ ಚಿಂತನೆ ನಡೆದಿದೆ. ಮನೆಗಳ ಪಕ್ಕದಲ್ಲಿ ಖಾಲಿ ಸೈಟ್ ಇದ್ದರೆ ಆ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಬಿಬಿಎಂಪಿ ಜೊತೆಗೆ ಒಡಂಬಡಿಕೆ ಮಾಡಲು ಚಿಂತಿಸಲಾಗಿದೆ. ಸರ್ಕಾರಿ ಖಾಲಿ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು ಚಿಂತಿಸಲಾಗಿದೆ ಎಂದರು.
ಈ ಎಲ್ಲಾ ವಿಚಾರವಾಗಿ ಅಧಿಕಾರಿಗಳು ಹಲವು ಸಲಹೆ ನೀಡಿದ್ದಾರೆ. ಪಾರ್ಕಿಂಗ್ ಶುಲ್ಕ ಕೆಲವು ಕಡೆಗಳಲ್ಲಿ ಮಾತ್ರ ಜಾರಿಯಲ್ಲಿದೆ. ಸ್ಮಾರ್ಟ್ ಪಾರ್ಕಿಂಗ್ ಶುಲ್ಕ ವ್ಯವಸ್ಥೆ ಇಡೀ ನಗರಕ್ಕೆ ವಿಸ್ತರಣೆ ಮಾಡಲು ಚಿಂತನೆ ಇದೆ. ಪಾರ್ಕಿಂಗ್ ಶುಲ್ಕವನ್ನು ಯಾವ ರೀತಿ ಸಂಗ್ರಹಿಸಬೇಕು ಮತ್ತು ಇನ್ನಿತರೆ ಮಾನದಂಡಗಳು ಹಾಗೂ ಮಾರ್ಗಸೂಚಿ ತಯಾರಿಸಿ ಕರಡು ಸಿದ್ಧಪಡಿಸಲು ಮುಖ್ಯಮಂತ್ರಿಗಳು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ ಎಂದು ತಿಳಿಸಿದರು.
ನಗರದಲ್ಲಿ ಪ್ರಸ್ತುತ 80-85 ಸ್ಥಳಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ಶುಲ್ಕ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇದೇ ರೀತಿ ನಗರದ ಎಲ್ಲಾ ಕಡೆ ಶುಲ್ಕ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸುವ ಅನಿವಾರ್ಯತೆ ಇದೆ ಎಂದು ತಿಳಿಸಿದರು.
ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವುದು ಮತ್ತು ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದ ಸಾಮಾನ್ಯ ನಾಗರಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಪಾರ್ಕಿಂಗ್ ಶುಲ್ಕ ನೀತಿ ಜಾರಿಗೆ ತರಲಾಗುತ್ತಿದೆ ಎಂದರು.
ಈ ವಿಚಾರದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ನೇತೃತ್ವದ ಸಮಿತಿಯ ಅಂತಿಮ ವರದಿ ಸಿಕ್ಕ ಬಳಿಕ ಕ್ಯಾಬಿನೆಟ್ನಲ್ಲಿ ಅಂಗೀಕಾರ ಪಡೆದು ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.