ಬೆಂಗಳೂರು: ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡು ಬಂದಿದ್ದು, ನಿಯಂತ್ರಣಕ್ಕೆ ಸರ್ಕಾರವು 50:50 ಸೂತ್ರ ಜಾರಿ ಮಾಡಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎರಡು ವಾರಗಳ ಕಾಲ ಯುಕೆಜಿ, ಎಲ್ಕೆಜಿ ಸೇರಿದಂತೆ 1ರಿಂದ 9ನೇ ತರಗತಿಗಳು ಹಾಗೂ ಪದವಿ, ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳು ರದ್ದುಗೊಂಡಿವೆ.
ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಂಗಳೂರು ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ವ್ಯಾಪ್ತಿಯಲ್ಲಿನ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ/ಎಲ್.ಕೆ.ಜಿ/ಯು.ಕೆ.ಜಿ. ಹಾಗೂ 1-9ನೇ ತರಗತಿವರೆಗೆ ಭೌತಿಕ ತರಗತಿಗಳನ್ನು ಇಂದಿನಿಂದ ಜನವರಿ 19ರವರೆಗೆ ಸ್ಥಗಿತಗೊಳಿಸಲಾಗಿದೆ. ಒಂದು ವೇಳೆ, ಕೊರೊನಾ ತೀವ್ರತೆ ಹೆಚ್ಚಾದರೆ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.
ಎಸ್ಎಸ್ಎಲ್ಸಿ, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ನಡೆಯಲಿವೆ. ಕಾರಣ ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ ಈ ಮಕ್ಕಳಿಗೆ ಭೌತಿಕ ತರಗತಿ ನಡೆಸುವುದು ಅನಿವಾರ್ಯ. ಹೀಗಾಗಿ ಬೆಂಗಳೂರಿನಲ್ಲಿ 10ರಿಂದ ದ್ವಿತೀಯ ಪಿಯುಸಿ ತರಗತಿಗಳು ಎಂದಿನಂತೆ ಸೋಮವಾರದಿಂದ ಶುಕ್ರವಾರದವರೆಗೆ ನಡೆಯಲಿವೆ. ವಿದ್ಯಾರ್ಥಿಗಳಿಗೆ ಕೋವಿಡ್-19ರ ಎಲ್ಲ ಮುಂಜಾಗ್ರತಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಭೌತಿಕ ತರಗತಿಗಳನ್ನು ಎಂದಿನಂತೆ ನಡೆಸಲು ಸೂಚಿಸಲಾಗಿದೆ. ಇದರೊಂದಿಗೆ ಮೆಡಿಕಲ್, ಪ್ಯಾರಾ ಮೆಡಿಕಲ್, ನರ್ಸಿಂಗ್ ವಿದ್ಯಾರ್ಥಿಗಳಿಗೂ ಯಾವುದೇ ನಿರ್ಬಂಧ ಹೇರಿಲ್ಲ.
ಈ ಅವಧಿಯಲ್ಲಿ ಪರ್ಯಾಯ ಮಾರ್ಗಗಳ ಮೂಲಕ ಅಂದರೆ ಆನ್ಲೈನ್/ಇತರ ಮಾರ್ಗಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಬೋಧನಾ ಚಟುವಟಿಕೆಗಳನ್ನು ಮುಂದುವರೆಸಲು ತಿಳಿಸಲಾಗಿದೆ. ಒಂದು ವೇಳೆ, ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ತರಗತಿ ನಡೆಸಿದರೆ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಸರಿಯಾದ ಕ್ರಮ ವಹಿಸಲು ಆಯಾ ಉಪನಿರ್ದೇಶಕರಿಗೆ ಸೂಚಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಇಂದಿನಿಂದ ಸೆಕ್ಷನ್ 144 ಜಾರಿ.. ನಿಯಮ ಉಲ್ಲಂಘಿಸಿದರೆ ಪೊಲೀಸರಿಂದ ಕಠಿಣ ಕ್ರಮ