ಬೆಂಗಳೂರು : ಹಾವೇರಿ ನಗರಸಭೆ ಕಾಮಗಾರಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ಹಣ ನಷ್ಟ ಉಂಟುಮಾಡಿದ ಪ್ರಕರಣದಲ್ಲಿ ಶಾಸಕ ನೆಹರು ಓಲೇಕಾರ್ ದೋಷಿಯನ್ನಾಗಿ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಅನರ್ಹಗೊಳ್ಳುವ ಭೀತಿಯಲ್ಲಿದ್ದ ಶಾಸಕ ನೆಹರು ಓಲೇಕಾರ್ ಅವರಿಗೆ ರಿಲೀಫ್ ಸಿಕ್ಕಂತಾಗಿದೆ. ಅಲ್ಲದೆ, ಚುನಾವಣೆಯಲ್ಲಿ ಸ್ಪರ್ಧಿಸಲೂ ಸಹ ಯಾವುದೇ ಅಡ್ಡಿ ಇಲ್ಲದಂತಾಗಿದೆ.
ತಮ್ಮನ್ನು ದೋಷಿಯಾಗಿ ತೀರ್ಮಾನಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಬಿಜೆಪಿ ಶಾಸಕ ನೆಹರು ಓಲೇಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ ತಡೆಯಾಜ್ಞೆ ನೀಡಿ ಆದೇಶಿಸಿದೆ.
ವಿಚಾರಣೆ ವೇಳೆ ಓಲೇಕಾರ ಪರ ವಕೀಲರು, ಪ್ರಕರಣದಲ್ಲಿ ಅರ್ಜಿದಾರರು ಕ್ರಿಮಿನಲ್ ಒಳಸಂಚು ರೂಪಿಸಿಲ್ಲ. ಅಧೀನ ನ್ಯಾಯಾಲಯದ ಆದೇಶ ದೋಷಪೂರಿತ ಆಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬರುತ್ತಿದೆ ಎಂಬ ಅಭಿಪ್ರಾಯಕ್ಕೆ ಹೈಕೋರ್ಟ್ ಬಂದಿದೆ. ಇದೇ ಕಾರಣಕ್ಕೆ ಅರ್ಜಿದಾರರಿಗೆ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ ವಿಧಿಸಿದ ಆದೇಶಕ್ಕೆ ತಡೆ ಸಹ ನೀಡಿದೆ. ಶಿಕ್ಷೆ ವಿಧಿಸಿದ ಆದೇಶವು ದೋಷಪೂರಿತವಾಗಿದೆ ಎಂದಾದರೆ ಅದರ ಪರಿಣಾಮಗಳನ್ನು ಆರೋಪಿ ಎದುರಿಸಬಾರದೆಂದು ಸುಪ್ರಿಂ ಕೋರ್ಟ್ ತೀರ್ಪು ನೀಡಿದೆ. ಅದರಂತೆ ಪ್ರಕರಣದಲ್ಲಿ ಅರ್ಜಿದಾರ ಯಾವುದೇ ಪಾತ್ರ ಇಲ್ಲದ ಕಾರಣ ಅವರನ್ನು ದೋಷಿಯಾಗಿ ತೀರ್ಮಾನಿಸಿದ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದ್ದರು.
ಇದನ್ನೂ ಓದಿ: ಅಪ್ರಾಪ್ತೆಯನ್ನು ವಿವಾಹವಾಗಿ ಸಮ್ಮತಿಯ ಲೈಂಗಿಕ ಸಂಪರ್ಕ: ಜಾಮೀನು ನಿರಾಕರಿಸಿದ ಹೈಕೋರ್ಟ್
ಅರ್ಜಿದಾರರ ಮನವಿಯನ್ನು ಆಕ್ಷೇಪಿಸಿದ ಲೋಕಾಯುಕ್ತ ಪರ ವಕೀಲರು, ಕ್ರಿಮಿನಲ್ ಪ್ರಕರಣದಲ್ಲಿ ಚುನಾಯಿತ ಜನಪ್ರತಿನಿಧಿಗಳು ಎರಡು ವರ್ಷ ಕಾಲ ಶಿಕ್ಷೆ ಗುರಿಯಾದರೆ ಅವರ ಸ್ಥಾನದ ತನ್ನಿಂದ ತಾನೇ ಅನರ್ಹತೆಯಾಗುತ್ತದೆ ಎಂದು ಸುಪ್ರಿಂ ಕೋರ್ಟ್ ತೀರ್ಪು ಸ್ಪಷ್ಟಪಡಿಸುತ್ತದೆ. ಪ್ರಕರಣದಲ್ಲಿ ಅರ್ಜಿದಾರರು ಕ್ರಿಮಿನಲ್ ಪಿತೂರಿ ನಡೆಸಿರುವ ಸಾಕ್ಷ್ಯಾಧಾರಗಳ ಸಮೇತ ವಿಶೇಷ ನ್ಯಾಯಾಲಯದಲ್ಲಿ ದೃಢಪಟ್ಟಿದೆ. ಆದ ಕಾರಣ ಅವರ ಮನವಿ ಪುರಸ್ಕರಿಸದೆ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕೋರಿದರು. ವಾದ - ಪ್ರತಿವಾದ ಆಲಿಸಿದ ನ್ಯಾಯಪೀಠ ಎರಡು ವರ್ಷಗಳ ಶಿಕ್ಷೆಗೆ ತಡೆ ನೀಡಿ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ ಏನು?: ಪ್ರಕರಣ ಸಂಬಂಧ ಶಾಸಕ ನೆಹರು ಓಲೇಕಾರ ಅವರನ್ನು ದೋಷಿಯಾಗಿ ತೀರ್ಮಾನಿಸಿ ಮತ್ತು ಅವರಿಗೆ ಎರಡು ವರ್ಷ ಸಾಧಾರಣಾ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (91ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ) 2023 ರ ಫೆಬ್ರವರಿ 13 ರಂದು ಹೊರಡಿಸಿತ್ತು. ಈ ತೀರ್ಪು ಪ್ರಶ್ನಿಸಿ ಓಲೇಕಾರ ಅವರು ಹೈಕೊರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಮಾರ್ಚ್ 3 ರಂದು ಓಲೇಕಾರಗೆ ವಿಧಿಸಿದ್ದ ಎರಡು ವರ್ಷದ ಶಿಕ್ಷೆಯನ್ನು ಅಮಾನತ್ತಿನಲ್ಲಿರಿಸಿದ ಹೈಕೋರ್ಟ್, ಜಾಮೀನು ಮಂಜೂರು ಮಾಡಿತ್ತು. ಇದೀಗ ದೋಷಿಯಾಗಿ ತೀರ್ಮಾನಿಸಿರುವ ಆದೇಶದ ಭಾಗಕ್ಕೆ ತಡೆ ನೀಡಲು ಅರ್ಜಿಯಲ್ಲಿ ಕೋರಿದ್ದರು.
ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಬಿಡುಗಡೆ ವಿಳಂಬ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್