ಬೆಂಗಳೂರು: ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಡಾ. ಕೆ.ನಾರಾಯಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಾರಾಯಣ್ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಕಣದಲ್ಲಿ ಬೇರೆ ಅಭ್ಯರ್ಥಿ ಸ್ಪರ್ಧಿಸದ ಹಿನ್ನೆಲೆ ನಾರಾಯಣ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ನೂತನವಾಗಿ ರಾಜ್ಯಸಭೆಗೆ ಆಯ್ಕೆಯಾದ ನಾರಾಯಣ್ ಇಂದು ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಂದ ಪ್ರಮಾಣಪತ್ರ ಸ್ವೀಕಾರ ಮಾಡಿದರು. ಕುಟುಂಬ ಸಮೇತರಾಗಿ ಪ್ರಮಾಣಪತ್ರ ಸ್ವೀಕಾರ ಮಾಡಿದರು. ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿತ್ತು. ಕಣದಲ್ಲಿ ಯಾರೂ ಇಲ್ಲದ ಹಿನ್ನೆಲೆ ನಾರಾಯಣ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಘೋಷಿಸಿ ಪ್ರಮಾಣಪತ್ರ ನೀಡಲಾಯಿತು.
ಕಳೆದ ಜೂನ್ 12ರಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಈರಣ್ಣ ಕಡಾಡಿ, ಅಶೋಕ್ ಗಸ್ತಿ, ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್‌ನಿಂದ ಹೆಚ್.ಡಿ.ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದರು. ಆದರೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಬಿಜೆಪಿ ಸದಸ್ಯ ಅಶೋಕ್ ಗಸ್ತಿ ಚಿಕಿತ್ಸೆ ಫಲಕಾರಿಯಾಗದೆ ರಾಜ್ಯಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸುವ ಅವಕಾಶ ದೊರೆಯುವ ಮುನ್ನವೇ ನಿಧನರಾಗಿದ್ದರು. ಇವರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿತ್ತು.
ಸದಸ್ಯ ಬಲದ ಕೊರತೆ ಇರುವ ಹಿನ್ನೆಲೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಈ ಹಿನ್ನೆಲೆ ಮುದ್ರಣ ಕ್ಷೇತ್ರದ ಹಿನ್ನೆಲೆ ಹೊಂದಿರುವ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಡಾ. ಕೆ.ನಾರಾಯಣ್ ಮಾತ್ರವೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ಅವರು ಅವಿರೋಧವಾಗಿ ಆಯ್ಕೆಯಾಗಿ ಪ್ರಮಾಣಪತ್ರ ಸ್ವೀಕರಿಸಿದ್ದಾರೆ.