ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಇಲ್ಲವೆಂದು ರಾಜ್ಯ ಬಿಜೆಪಿ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಪತ್ರಿಕಾ ಪ್ರಕಟಣೆ ಮೂಲಕ ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ.
ಕೆಲ ವಾಹಿನಿಗಳು ಪದೇ ಪದೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ಆಗುತ್ತದೆ ಎಂದು ವರದಿ ಪ್ರಸಾರ ಮಾಡುತ್ತಿವೆ. ಈ ವರದಿಗಳನ್ನು ಬಿಜೆಪಿ ಖಡಾಖಂಡಿತವಾಗಿ ಅಲ್ಲಗಳೆಯುತ್ತದೆ, ಈ ವರದಿಗಳು ಸಂಪೂರ್ಣ ನಿರಾಧಾರ ಮತ್ತು ಸತ್ಯಕ್ಕೆ ದೂರವಾಗಿದ್ದು, ಜನರನ್ನು ದಾರಿ ತಪ್ಪಿಸುವಂಥದ್ದಾಗಿದೆ ಎಂದು ಪಕ್ಷದ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸಲಾಗುತ್ತದೆ, ರಾಜ್ಯದಲ್ಲಿ ನಾಯಕತ್ವ ಬದಲಾಣೆ ಆಗಲಿದೆ ಎನ್ನುವ ವರದಿಗಳು ಪ್ರಕಟಗೊಳ್ಳುತ್ತಿವೆ. ಸಿಎಂ ದೆಹಲಿ ಪ್ರವಾಸದ ನಂತರ ಈ ಸುದ್ದಿಗಳು ಮತ್ತಷ್ಟು ಹೆಚ್ಚಿದ್ದವು. ಇದೀಗ ರಾಜ್ಯ ಬಿಜೆಪಿ ಅಧಿಕೃತ ಪ್ರಕಟಣೆ ಮೂಲಕ ವದಂತಿಗಳಿಗೆ ತೆರೆ ಎಳೆದಿದೆ.