ಬೆಂಗಳೂರು: ಇತ್ತೀಚಿನ ಕೆಲ ದಿನಗಳಲ್ಲಿ ನಡೆದಿರುವ ವಿದ್ಯಮಾಗಳು ಬಿಜೆಪಿ ಮೇಲೆ ನಕಾರಾತ್ಮಕ ಪರಿಣಾಮ ಬೀರಿವೆ ಎನ್ನಲಾಗ್ತಿದೆ. ಉಪ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎನ್ನುವ ಮಾಹಿತಿ ಹಿನ್ನೆಲೆ ನಾಳೆ ರಾಜ್ಯ ಬಿಜೆಪಿ ಕೋರ್ ಕಮಿಟಿಯ ತುರ್ತು ಸಭೆ ಕರೆಯಲಾಗಿದೆ.
ನಾಳೆಯಿಂದ ರಾಜ್ಯ ಬಿಜೆಪಿ ನಾಯಕರು ದಿಢೀರ್ ಸರಣಿ ಸಭೆ ಆರಂಭಿಸುತ್ತಿದ್ದಾರೆ. ಬುಧವಾರ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ದಕ್ಷಿಣ ಕರ್ನಾಟಕದ 8 ವಿಧಾನಸಭಾ ಕ್ಷೇತ್ರಗಳ ಮುಖಂಡರ ಸಭೆ ನಡೆಯಲಿದೆ.
ಬೆಳಗ್ಗೆಯಿಂದ ಸಂಜೆಯವರೆಗೆ ದಕ್ಷಿಣ ಕರ್ನಾಟಕದಲ್ಲಿ ಉಪ ಚುನಾವಣೆ ನಡೆಯಲಿರುವ ಎಲ್ಲಾ 8 ಕ್ಷೇತ್ರಗಳ ಸಭೆ ಬಳಿಕ ರಾಜ್ಯ ಬಿಜೆಪಿ ಕೋರ್ ಕಮಿಟಿ ತುರ್ತು ಸಭೆ ಜರುಗಲಿದೆ.
ಗುರುವಾರ ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕ ಭಾಗದ 7 ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು ಹಾಗೂ ಮುಖಂಡರೊಂದಿಗೆ ಸಭೆ ನಡೆಸಲಾಗುತ್ತದೆ.
ಉಪ ಚುನಾವಣೆಯಲ್ಲಿ ಸೋಲಿನ ಭಯ?
ಕನಿಷ್ಠ 8 ಸ್ಥಾನದಲ್ಲಾದರೂ ಶತಾಯ ಗತಾಯ ಗೆಲ್ಲಲು ಕಾರ್ಯತಂತ್ರ ರೂಪಿಸಲು ಕಮಲ ಪಡೆ ಮುಂದಾಗಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂಗಳಾದ ಗೋವಿಂದ ಕಾರಜೋಳ, ಡಾ.ಅಶ್ವಥ್ ನಾರಾಯಣ, ಲಕ್ಷ್ಮಣ್ ಸವದಿ, ಸಚಿವರಾದ ಆರ್.ಅಶೋಕ್, ಕೆ.ಎಸ್ ಈಶ್ವರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.