ಬೆಂಗಳೂರು: 15 ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ ಕರೆಯಲಾಗಿದೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, 15 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ, ಅನರ್ಹ ಶಾಸಕರ ವಿಚಾರದಲ್ಲಿ ಸುಪ್ರೀಂಕೋರ್ಟ್ ನಡೆ ಸೇರಿ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ಹೊಸಕೋಟೆ ಕ್ಷೇತ್ರದ ಟಿಕೆಟ್ಗಾಗಿ ಹೈಡ್ರಾಮಾ ನಡೆಯುತ್ತಿದ್ದು, ಹಲವು ಕ್ಷೇತ್ರದಲ್ಲಿ ಇದೇ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಪಕ್ಷದ ಸ್ಥಳೀಯ ನಾಯಕರು ಮತ್ತು ಆಕಾಂಕ್ಷಿಗಳ ಮನವೊಲಿಕೆ ಮಾಡುವ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ.