ಬೆಂಗಳೂರು : ನಾಳೆ ರಾಜ್ಯ ಬಿಜೆಪಿ ಕೋರ್ ಕಮಿಟಿಯ ಮಹತ್ವದ ಸಭೆ ನಡೆಯಲಿದೆ. ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗುತ್ತದೆ.
ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ್ ಭವನದಲ್ಲಿ ನಾಳೆ ಬೆಳಗ್ಗೆ 8.30ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಸಾಮಾನ್ಯವಾಗಿ ಸಂಜೆ ನಡೆಯುವ ಕೋರ್ ಕಮಿಟಿ ಸಭೆ ರಾಜ್ಯ ಉಸ್ತುವಾರಿಗಳ ಸಮಯಾವಕಾಶದ ಕಾರಣಕ್ಕಾಗಿ ಬೆಳಗ್ಗೆಯೇ ನಡೆಯಲಿದೆ.
ಈಗಾಗಲೇ ಪ್ರತಿಪಕ್ಷ ಕಾಂಗ್ರೆಸ್ ಉಪ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಆಡಳಿತಾರೂಢ ಬಿಜೆಪಿಯಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಪಟ್ಟಿ ಅಂತಿಮಗೊಳಿಸುವ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಸಮಾಲೋಚಿಸಲಾಗುತ್ತದೆ.
ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಸಚಿವ ಜಗದೀಶ್ ಶೆಟ್ಟರ್ ಸೊಸೆ ಶ್ರದ್ಧಾ, ಸಚಿವ ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ, ರಾಜ್ಯಸಭೆ ಮಾಜಿ ಸದಸ್ಯ ಪ್ರಭಾಕರ್ ಕೋರೆ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಮಹಾಂತೇಶ್ ಕಮಟಗಿಮಠ ಮತ್ತು ಪಕ್ಷದ ಮಹಿಳಾ ನಾಯಕಿ ಭಾರತಿ ಮುಗ್ದಂ ಹೆಸರುಗಳು ಮುನ್ನಲೆಯಲ್ಲಿವೆ.
ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಪ್ರತಾಪ್ ಗೌಡ ಪಾಟೀಲ್ ಹೆಸರು ಮಾತ್ರ ಚಾಲ್ತಿಯಲ್ಲಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿರುವ ಅವರಿಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕಿರುವ ಕಾರಣ ಪ್ರತಾಪ್ ಗೌಡ ಪಾಟೀಲ್‌ಗೆ ಟಿಕೆಟ್ ಪಕ್ಕಾ ಎನ್ನಲಾಗುತ್ತಿದೆ.
ಇನ್ನು, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಲಾಕ್ಡೌನ್ ವೇಳೆ ಕ್ಷೇತ್ರದ ಜನರಿಗೆ ಫುಡ್ಕಿಟ್ ನೀಡಿ ಜನಮನ್ನಣೆ ಪಡೆದಿರುವ ಬಿಜೆಪಿ ಮುಖಂಡ ಶರಣು ಸಲಗಾರ್ ಮತ್ತು ಎಂ ಜಿ ಮೂಳೆ ಹೆಸರು ಚಾಲ್ತಿಯಲ್ಲಿವೆ.
ಇದರ ಜೊತೆಗೆ ಸೂರ್ಯಕಾಂತ ನಾಗಮಾರಪಲ್ಲಿ ಹೆಸರು ಕೂಡ ಕೇಳಿ ಬರುತ್ತಿದೆ. ಆದರೆ, ಶರಣು ಸಲಗಾರ್ ಮತ್ತು ಸೂರ್ಯಕಾಂತ ನಾಗಮಾರಪಲ್ಲಿ ಹೆಸರಿಗೆ ಸ್ಥಳೀಯವಾಗಿ ವಿರೋಧ ವ್ಯಕ್ತವಾಗುತ್ತಿದೆ. ಆಕಾಂಕ್ಷಿಗಳ ಪಟ್ಟಿ ದೊಡ್ಡದಿರುವ ಹಿನ್ನೆಲೆ ನಾಳೆ ಕೋರ್ ಕಮಿಟಿ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ. ಯಾವ ಹೆಸರುಗಳನ್ನು ಹೈಕಮಾಂಡ್‌ಗೆ ಕಳಿಸಬೇಕು ಅನ್ನೋ ನಿರ್ಧಾರ ಕೈಗೊಳ್ಳಲಾಗುತ್ತದೆ.
ಯತ್ನಾಳ್ ವಿರುದ್ಧ ದೂರು ಸಾಧ್ಯತೆ : ಇಂದು ಸಂಜೆ 6 ಗಂಟೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ರಾಜ್ಯ ಬಿಜೆಪಿ ನಾಯಕರು ಇಂದು ರಾತ್ರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಪದೇಪದೆ ಬಹಿರಂಗವಾಗಿ ಆರೋಪ ಮಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕೈಗೊಳ್ಳುವಂತೆ ದೂರು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.