ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಇರುವ ಕಾರಣ ನಗರೋತ್ಥಾನ ಯೋಜನೆಯಡಿ ಬೆಂಗಳೂರಲ್ಲಿ ಕಾಮಗಾರಿ ಪ್ರಾರಂಭಿಸುವುದಕ್ಕೆ ರಾಜ್ಯ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾಗಿದೆ.
ಈ ಸಂಬಂಧ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಮಾಜಿ ಡಿಸಿಎಂ ಆರ್. ಅಶೋಕ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಕುಡಿಯುವ ನೀರು, ಪ್ರಕೃತಿ ವಿಕೋಪ ನಿರ್ವಹಣೆ ಸಂಬಂಧ ಕಾಮಗಾರಿಗಳನ್ನು ಹೊರತುಪಡಿಸಿ ಬೇರೆ ಕಾಮಗಾರಿಗಳಿಗೆ ಅನುಮತಿ ನೀಡಬಾರದು ಎಂದು ನಾಳೆ ಚುನಾವಣಾಧಿಕಾರಿಯನ್ನು ಭೇಟಿಯಾಗಿ ಮನವಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
ಶನಿವಾರ ಪಾಲಿಕೆ ಸಭೆಯಲ್ಲಿ ಮುಖ್ಯಮಂತ್ರಿ ನಗರೋತ್ಥಾನ ಹಾಗೂ ಎಸ್ಐಪಿ ಯೋಜನೆಯಡಿ 4,261 ಕೋಟಿ ರೂ. ಮೊತ್ತದ ಕಾಮಗಾರಿಯನ್ನು ಕೆಆರ್ಐಡಿಎಲ್ ಸಂಸ್ಥೆಗೆ ನೀಡಿರುವುದರಿಂದ ಟೆಂಡರ್ ಇಲ್ಲದೆ ಕಾಮಗಾರಿ ನಡೆಸಲು ಪ್ರಾರಂಭಿಸಿರುವುದು ಭ್ರಷ್ಟಾಚಾರಕ್ಕೆ ಅವಕಾಶ ಮಾಡಿದಂತಾಗುತ್ತದೆ ಎಂದು ಆರೋಪಿಸಿದ್ದಾರೆ.
ಮೇ 27ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಇದು ನೀತೆ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಚುನಾವಣಾ ಆಯೋಗ ಈ ಬಗ್ಗೆ ಗಮನಹರಿಸುವಂತೆ ಮನವಿ ಮಾಡಿದ್ದಾರೆ.
ಪಾಲಿಕೆ ವಿಶೇಷ ಆಯುಕ್ತ ಮನೋಜ್ ಕುಮಾರ್ ಅವರು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ನೀತಿ ನಿರೂಪಣೆಗೆ ಸಂಬಂಧಿಸಿದಂತೆ ಯಾವುದೇ ಹೊಸ ನಿರ್ಧಾರ ತೆಗೆದುಕೊಳ್ಳುವ ಹಾಗಿಲ್ಲ. ಆದರೆ ಈ ನಿಯಮವನ್ನು ಧಿಕ್ಕರಿಸಿ ಕಾಮಗಾರಿ ಆರಂಭಿಸಲಾಗುತ್ತಿದೆ ಎಂದು ದೂರಿದ್ದಾರೆ.
4,261 ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ಕೆಆರ್ಐಡಿಎಲ್‌ಗೆ ನೀಡಿರುವುದರ ಹಿಂದೆ ಸ್ವಹಿತಾಸಕ್ತಿ ಅಡಗಿದೆ. ಮತದಾನಕ್ಕೂ ಮುನ್ನ ಕೆಲ ಪ್ರಭಾವಿ ಗುತ್ತಿಗೆದಾರರಿಂದ ಚುನಾವಣೆಗಾಗಿ ಲಂಚ ಪಡೆದಿರುವ ಆಡಳಿತ ಪಕ್ಷದ ನಾಯಕರು ಗುತ್ತಿಗೆ ಕಾಮಗಾರಿ ನೀಡುವ ಮೂಲಕ ಅನುಕೂಲ ಮಾಡಲು ಹೊರಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಸಂಬಂಧ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪಾಲಿಕೆ ಆತುರವಾಗಿ ತೆಗೆದುಕೊಂಡಿರುವ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕೆಂದು ಆಯೋಗ ನಿರ್ದೇಶನ ನೀಡಬೇಕು ಎಂದು ಬಿಜೆಪಿ ಮುಖಂಡರು ಮನವಿ ಮಾಡಿದ್ದಾರೆ.