ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ವಿಳಂಬ ಸಂಬಂಧ ರಾಜ್ಯಪಾಲರು ಹಾಗೂ ಸ್ಪೀಕರ್ ಭೇಟಿ ಮಾಡಿ ಮಾತುಕತೆ ನಡೆಸಬೇಕು ಎಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿರ್ಣಯ ಕೈಗೊಂಡಿದೆ.
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ನಾಳೆ ಮತ್ತೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದೆ. ತಕ್ಷಣ ರಾಜೀನಾಮೆ ನೀಡಬೇಕು ಎನ್ನುವ ಒತ್ತಾಯ ಮಾಡಿ ಇಂದು ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡಿದ್ದೇವೆ. ಹಾಗೇ ನಾಳೆ ಎಲ್ಲಾ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ 11:30ಕ್ಕೆ ಪ್ರತಿಭಟನೆ ಮಾಡುತ್ತೇವೆ. ಸಿಎಂ ತಕ್ಷಣ ರಾಜೀನಾಮೆ ನೀಡಬೇಕು ಎನ್ನುವ ಒತ್ತಾಯ ಮಾಡುತ್ತೇವೆ ಎಂದರು.
ಮಧ್ಯಾಹ್ನ 1 ಗಂಟೆಗೆ ಪಕ್ಷದ ಉನ್ನತ ಮಟ್ಟದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಲಿದೆ. ರಾಜಕೀಯ ವಿದ್ಯಮಾನ ಗಮನಿಸುತ್ತಿರುವ ಈ ಸಂದರ್ಭದಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡುವಂತೆ ನಿಯೋಗ ಒತ್ತಾಯ ಮಾಡಲಿದೆ. ನಂತರ ಮಧ್ಯಾಹ್ನ 3 ಗಂಟೆಗೆ ಪಕ್ಷದ ಉನ್ನತ ಮಟ್ಟದ ನಿಯೋಗದಿಂದ ಸ್ಪೀಕರ್ ಭೇಟಿ ಮಾಡಿ, ಶಾಸಕರ ರಾಜೀನಾಮೆ ಪರಿಶೀಲಿಸಿ ತಕ್ಷಣ ಅಂಗೀಕಾರ ಮಾಡುವ ಒತ್ತಾಯ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದರು.