ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಚಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ದಾ ಆದೇಶ ಹೊರಡಿಸಿದ್ದಾರೆ. ಚುನಾವಣಾ ಪ್ರಚಾರ ಸಮಿತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರನ್ನಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಕಣಕ್ಕೆ ದುಮುಕಲು ಬಿಜೆಪಿ ಸನ್ನದ್ದವಾಗಿದ್ದು, ಪ್ರಚಾರ ಕಾರ್ಯಕ್ಕೆ ತಂಡವನ್ನು ರಚಿಸಿ ಅಧಿಕೃತವಾಗಿ ಅಖಾಡಕ್ಕಿಳಿಯುತ್ತಿದೆ. ಈಗಾಗಲೇ ಪ್ರತಿಪಕ್ಷ ಕಾಂಗ್ರೆಸ್ ಹಿರಿಯ ನಾಯಕ ಎಂ.ಬಿ ಪಾಟೀಲ್ ಅಧ್ಯಕ್ಷತೆಯ ಪ್ರಚಾರ ಸಮಿತಿ ರಚಿಸಿಕೊಂಡಿದ್ದು, ಆಡಳಿತಾರೂಢ ಬಿಜೆಪಿ ಇಂದು ಅಧಿಕೃತವಾಗಿ ಚುನಾವಣಾ ಪ್ರಚಾರ ಸಮಿತಿ ರಚಿಸಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಪ್ರಚಾರ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಚುನಾವಣಾ ನಿರ್ವಹಣಾ ಸಮಿತಿ ರಚಿಸಿ ಅದಕ್ಕೆ ಶೋಭಾ ಕರಂದ್ಲಾಜೆ ಅವರನ್ನು ಸಂಚಾಲಕರನ್ನಾಗಿ ಮಾಡಿದೆ. ಈ ಸಮಿತಿ ಸಂಪೂರ್ಣವಾಗಿ ಸಂಘಟನಾತ್ಮಕ ಸದಸ್ಯರ ಹೊಡೆತದಲ್ಲಿ ಇದ್ದು ಕಾರ್ಯ ನಿರ್ವಹಿಸಲಿದೆ.
ಪ್ರಚಾರ ಸಮಿತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯ ಚುನಾವಣಾ ಪ್ರಚಾರ ಸಮಿತಿಯ ಸದಸ್ಯರನ್ನಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷದ ನಾಯಕರಾದ ಡಿ.ವಿ ಸದಾನಂದ ಗೌಡ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಎ ನಾರಾಯಣಸ್ವಾಮಿ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಸಚಿವರಾದ ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಆರ್. ಅಶೋಕ್, ಶಶಿಕಲಾ ಜೊಲ್ಲೆ, ಸಿ.ಸಿ ಪಾಟೀಲ್, ಎಸ್.ಟಿ ಸೋಮಶೇಖರ್, ಡಾ. ಕೆ. ಸುಧಾಕರ್, ಪ್ರಭು ಚೌಹಾಣ್, ಅಶ್ವತ್ಥನಾರಾಯಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಸಂಸದರಾದ ವಿ. ಶ್ರೀನಿವಾಸ್ ಪ್ರಸಾದ್, ಪಿ.ಸಿ ಮೋಹನ್, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ರಮೇಶ್ ಜಾರಕಿಹೊಳಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಿಸಲಾಗಿದೆ.
ಚುನಾವಣಾ ನಿರ್ವಹಣಾ ಸಮಿತಿ: ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರ ಸಚಿವ ಭಗವಂತ ಖೂಬಾ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಖಂಡರಾದ ಅರವಿಂದ ಲಿಂಬಾವಳಿ, ರಘುನಾಥರಾವ್ ಮಲ್ಕಾಪುರೆ, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನ, ತೇಜಸ್ವಿನಿ ಅನಂತಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಎನ್. ರವಿಕುಮಾರ್, ಸಿದ್ದರಾಜು, ಸಚಿವ ಅಶ್ವತ್ಥನಾರಾಯಣ, ಮಹೇಶ್ ಟೆಂಗಿನಕಾಯಿ, ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್, ಎಸ್ಸಿ ಮೋರ್ಚಾ ರಾಜ್ಯಾದ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹಾಗೂ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಅವರನ್ನ ಸದಸ್ಯರನ್ನಾಗಿ ನೇಮಿಸಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಬಿಜೆಪಿ ಹೈಕಮಾಂಡ್ ಚುನಾವಣಾ ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳ ನೇಮಕ ಮಾಡಿತ್ತು. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿಗಳಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವಿಯಾ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ನೇಮಿಸಲಾಗಿದೆ. ಈಗಾಗಲೇ ಇವರೆಲ್ಲರೂ ಸಹ ರಾಜ್ಯಕ್ಕೆ ಭೇಟಿ ನೀಡುವ ಮೂಲಕ ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್ ಸಹ ಉಸ್ತುವಾರಿಗಳಾಗಿ ಮನ್ಸೂಕ್ ಮಾಂಡವಿಯಾ ಅಣ್ಣಾಮಲೈ ನೇಮಕ