ಬೆಳಗಾವಿ: ವಾಯವ್ಯ ಪದವಿ, ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕುಂದಾನಗರಿ ಬೆಳಗಾವಿಯಲ್ಲಿಂದು ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಿದೆ. ಜೂನ್ 13ರಂದು ವಾಯುವ್ಯ ಶಿಕ್ಷಕರ ಪದವಿ ಕ್ಷೇತ್ರದ ಚುನಾವಣೆ ನಡೆಯಲಿದ್ದು, ವಾಯುವ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಸಿಎಂ ಬಿಎಸ್‌ವೈ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಇಂದು ಬೆಳಗಾವಿಗೆ ಆಗಮಿಸಲಿದ್ದು, ಅಭ್ಯರ್ಥಿಗಳಿಗೆ ಸಾಥ್ ನೀಡುವರು.
ವಾಯುವ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ್, ವಾಯುವ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹನುಮಂತ ನಿರಾಣಿಯಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕನ್ನಡ ಸಾಹಿತ್ಯ ಭವನದಲ್ಲಿ ಸೇರಲಿರುವ ಕಾರ್ಯಕರ್ತರು ಬಳಿಕ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ರ್ಯಾಲಿ ನಡೆಸಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.
ಸಚಿವರಾದ ಗೋವಿಂದ ಕಾರಜೋಳ, ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ, ಬೆಳಗಾವಿ ಜಿಲ್ಲೆಯ ಹಾಲಿ, ಮಾಜಿ ಬಿಜೆಪಿ ಶಾಸಕರು, ಸಂಸದರು, ಎಂಎಲ್‌ಸಿಗಳು ಭಾಗವಹಿಸಲಿದ್ದಾರೆ. ಬಳಿಕ ಬೆಳಗಾವಿಯ ಸದಾಶಿವನಗರದ ಮೈದಾನದಲ್ಲಿ ಬಿಜೆಪಿ ಸಮಾವೇಶ ನಡೆಯಲಿದೆ. ಸಮಾವೇಶಕ್ಕೆ ಜಾರಕಿಹೊಳಿ ಬ್ರದರ್ಸ್ ಹಾಜರಾಗ್ತಾರಾ? ಅನ್ನೋದನ್ನು ಕಾದು ನೋಡಬೇಕಿದೆ.
2ನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೇರಿದ ಬೆನಕೆ: ಶಾಸಕ ಅನಿಲ್ ಬೆನಕೆ ಅವರನ್ನು ಬೆಳಗಾವಿ ಬಿಜೆಪಿ ನಗರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಶಾಸಕರಾಗುವುದಕ್ಕಿಂತ ಮುಂಚೆ ಶಾಸಕ ಬೆನಕೆ ಮಹಾನಗರ ಅಧ್ಯಕ್ಷರಾಗಿದ್ದರು.
ಹಾಲಿ ಶಾಸಕರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಿದ ಬಗ್ಗೆ ಬೆಳಗಾವಿ ರಾಜಕಾರಣದಲ್ಲಿ ಬಿಸಿಬಿಸಿ ಚರ್ಚೆಗಳು ಆರಂಭಗೊಂಡಿವೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅನಿಲ್ ಬೆನಕೆಗೆ ಬಿಜೆಪಿ ಟಿಕೆಟ್ ಕೈ ತಪ್ಪುತ್ತಾ? ಅಥವಾ ಪಕ್ಷ ಸಂಘಟನೆ ದೃಷ್ಟಿಯಿಂದ ಈ ಜವಾಬ್ದಾರಿ ನೀಡಲಾಗಿದೆಯೇ? ಎಂಬ ಬಗ್ಗೆ ಚರ್ಚೆಗಳು ನಡೆದಿವೆ. ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಇವರಿಗೆ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನ ನೀಡಿರುವುದು ಕುತೂಹಲ ಕೆರಳಿಸಿದೆ.