ಬೆಂಗಳೂರು : ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಎಂ ವಿ ರಾಜಶೇಖರನ್ ಅವರ ನಿಧನಕ್ಕೆ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್‌ಕುಮಾರ್ ಕಟೀಲ್, ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಡಾ. ಸುಧಾಕರ್, ಸಚಿವ ನಾರಾಯಣಗೌಡ ಸೇರಿ ಬಿಜೆಪಿಯ ಹಿರಿಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಹಿರಿಯ ಮುತ್ಸದ್ಧಿಯಾಗಿ, ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ, ರಾಜ್ಯ ರಾಜಕಾರಣದಲ್ಲಿಯೂ ಅತ್ಯಂತ ಸಕ್ರಿಯರಾಗಿದ್ದ ಶ್ರೀ ಎಂ ವಿ ರಾಜಶೇಖರನ್ ಅವರು ಇಂದು ನಿಧನರಾಗಿರುವುದು ತುಂಬಾ ದುಃಖದ ಸಂಗತಿ. ಕಟ್ಟಾ ಗಾಂಧಿವಾದಿಯಾಗಿ ಸರಳ ಮತ್ತು ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದ ಶ್ರೀ ರಾಜಶೇಖರ್ ಅವರು ನಮ್ಮ ರಾಜ್ಯದ ಅನೇಕ ಅಭಿವೃದ್ಧಿ ಯೋಜನೆಗಳಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆಯಿಂದ ಕರ್ನಾಟಕವು ಒಬ್ಬ ಹಿರಿಯ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬಕ್ಕೆ ಮತ್ತು ಅವರ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾನು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.