ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ಆರಂಭಿಸಿರುವ ಬಿಜೆಪಿ ಕ್ಷೇತ್ರವಾರು ಸಂಘಟನೆ ಚುರುಕುಗೊಳಿಸುವ ಕುರಿತು ನಾಳೆ ರಾಜ್ಯ ಪದಾಧಿಕಾರಿಗಳ ಮತ್ತು ಮಾಜಿ ಶಾಸಕರ ಸಭೆ ಕರೆದಿದೆ. ಹೈಕಮಾಂಡ್ ನಿರ್ದೇಶನದ ಮೇರೆಗೆ ನಡೆಯುತ್ತಿರುವ ಸಭೆಯಲ್ಲಿ ಚುನಾವಣಾ ಕಾರ್ಯತಂತ್ರದ ಆರಂಭಿಕ ಹಂತದ ಸಮಾಲೋಚನೆ ನಡೆಯಲಿದೆ.
ನಾಳೆ ಬೆಳಗ್ಗೆ 10 ಗಂಟೆಗೆ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಲು ಪೂರಕವಾಗಿ ಕೈಗೊಳ್ಳಲಿರುವ ಸಂಘಟನಾತ್ಮಕ ಚಟುವಟಿಕೆಗಳ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತದೆ.
ರಾಜ್ಯ ಪದಾಧಿಕಾರಿಗಳ ಸಭೆ ಮುಕ್ತಾಯದ ಬಳಿಕ ಮಧ್ಯಾಹ್ನ 2 ಗಂಟೆಗೆ ಬಿಜೆಪಿ ಮಾಜಿ ಶಾಸಕರ ಸಭೆ ನಡೆಯಲಿದೆ. ಅರುಣ್ ಸಿಂಗ್ ಮತ್ತು ಕಟೀಲ್ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಸೋತ ಕ್ಷೇತ್ರಗಳಲ್ಲಿ ಸಂಘಟನೆ ಬಲಪಡಿಸುವ ಮತ್ತು ಗೆಲ್ಲುವ ಕಾರ್ಯತಂತ್ರ ಕುರಿತು ಚರ್ಚೆ ನಡೆಸಲಾಗುತ್ತದೆ, ಸ್ವಂತ ಬಲದ ಮೇಲೆ ಸರ್ಕಾರ ರಚಿಸಲು ಈಗ ಸೋತಿರುವ ಕನಿಷ್ಠ 20 ಸ್ಥಾನ ಗೆಲ್ಲಬೇಕಿರುವ ಹಿನ್ನಲೆಯಲ್ಲಿ ಮಾಜಿ ಶಾಸಕರನ್ನ ವಿಶ್ವಾಸಕ್ಕೆ ಪಡೆದು ಕಾರ್ಯತಂತ್ರ ರೂಪಿಸುವ ಕುರಿತು ಸಮಾಲೋಚನೆ ನಡೆಯಲಿದೆ.
ನಾಳಿನ ಸಭೆಯಲ್ಲಿ ಭಾಗವಹಿಸಲು ಬುಧವಾರ ರಾತ್ರಿಯೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅರುಣ್ ಸಿಂಗ್ ಬಳಿಕ ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನಾಳೆ ಬೆಳಗ್ಗೆ ಅವರು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದು, ಬಳಿಕ ರಾತ್ರಿ ಅವರು ದೆಹಲಿಗೆ ಹಿಂತಿರುಗಲಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪನವರನ್ನು ಬಿಜೆಪಿ ಗುರುತಿಸಿರುವುದು ಸಂತೋಷ: ಸಿದ್ದರಾಮಯ್ಯ