ಬೆಂಗಳೂರು: ಅತಿ ಹೆಚ್ಚು ಕಾಲ ಪ್ರಧಾನಿಯಾಗಿ ದೇಶಕ್ಕೆ ಸೇವೆ ಸಲ್ಲಿಸಿದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾಗಿ ನರೇಂದ್ರ ಮೋದಿ ಹೊರಹೊಮ್ಮಿದ್ದು, ಅವರನ್ನು ಅಭಿನಂದಿಸುವುದಾಗಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.
ಎರಡನೇ ಬಾರಿ ಪ್ರಧಾನಿಯಾಗಿರುವ ಮೋದಿ 2269 ದಿನಗಳನ್ನು ಮುಗಿಸುವ ಮೂಲಕ ಬಿಜೆಪಿಯವರೇ ಆದ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. ನೆಹರೂ, ಇಂದಿರಾ ಗಾಂಧಿ, ಮನಮೋಹನ್ ಸಿಂಗ್ ಮೊದಲ ಮೂರು ಸ್ಥಾನದಲ್ಲಿದ್ದರೆ, ಮೋದಿ ಒಟ್ಟಾರೆ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ದೇಶದ ನಾಲ್ಕನೇ ಪ್ರಧಾನಿಯಾಗಿದ್ದಾರೆ. ಅವರಿಗೆ ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ದೇಶದ ಪ್ರಧಾನಿಯಾಗಿ ಅತಿ ಹೆಚ್ಚು ದಿನಗಳ ಕಾಲ ಅಡಳಿತ ಮಾಡಿದ ನಾಲ್ಕನೇ ಪ್ರಧಾನಿ ಹಾಗೂ ಕಾಂಗ್ರೆಸ್ಸೇತರ ಮೊದಲ ಪ್ರಧಾನಮಂತ್ರಿಯಾಗಿರುವ ಹೆಮ್ಮೆ ಮತ್ತು ಗೌರವಕ್ಕೆ ಪಾತ್ರರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.