ಬೆಂಗಳೂರು: ಕೊರೊನಾ ಸೋಂಕು ತಗುಲಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗುವಂತೆ ಬಿಜೆಪಿ ನಾಯಕರು ಹಾರೈಸಿ ಟ್ವೀಟ್ ಮಾಡಿದ್ದಾರೆ.
ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯನವರಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ತಿಳಿದು ಬಂದಿದೆ. ರಾಜ್ಯ ಕಂಡ ಆದರ್ಶ ರಾಜಕಾರಣಿ ಅವರು. ಅವರಿಗೆ ಪಾಸಿಟಿವ್ ಬಂದಿರುವುದು ನನಗೆ ನೋವಾಗಿದೆ. ಆದಷ್ಟು ಬೇಗನೆ ಅವರು ಚೇತರಿಸಿಕೊಂಡು ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರ ಆರೋಗ್ಯ ಸ್ಥಿರವಾಗಿದೆ. ರಾಜ್ಯದ ಜನ ಆತಂಕ ಪಡುವ ಅಗತ್ಯವಿಲ್ಲ. ಸಿಎಂ ಬಿಎಸ್‌ವೈ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಇಬ್ಬರೂ ಬೇಗ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಶೀಘ್ರ ಗುಣಮುಖರಾಗಿ ಸಿದ್ದರಾಮಯ್ಯ ಅವರೇ. ನೀವು ಬೇಗನೇ ಚೇತರಿಸಿಕೊಳ್ಳುವಂತೆ ನನ್ನ ಪ್ರಾರ್ಥನೆ. Wish you a speedy recovery! ಎಂದು ಡಿಸಿಎಂ ಡಾ. ಅಶ್ವತ್ಥ ನಾರಾಯಣ್ ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯನವರು ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಡಿಸಿಎಂ ಗೋವಿಂದ ಕಾರಜೋಳ ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯನವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಅವರು ಆದಷ್ಟು ಬೇಗ ಪೂರ್ಣಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಬೇಗ ಗುಣಮುಖರಾಗಿ ಬನ್ನಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾರೈಸಿದ್ದಾರೆ.