ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ತಮ್ಮ ಅಹವಾಲುಗಳನ್ನು ಪಕ್ಷದ ನಾಯಕರ ಮುಂದಿಟ್ಟಿದ್ದಾರೆ. ಇದರಲ್ಲಿ ಅನುದಾನ ಬಿಡುಗಡೆ ವಿಷಯ ಪ್ರಮುಖವಾಗಿ ಪ್ರಸ್ತಾಪವಾಗಿದೆ ಎಂದು ತಿಳಿದುಬಂದಿದೆ.
ನಗರದ ಖಾಸಗಿ ಹೋಟೆಲ್ನಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಂದರ್ಭದಲ್ಲಿ ಶಾಸಕರು ಸರ್ಕಾರದ ಬೆನ್ನಿಗೆ ನಿಲ್ಲಬೇಕು, ಸರ್ಕಾರವನ್ನು ಸಮರ್ಥಿಸಿಕೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ಶಾಸಕರಿಗೆ ಸೂಚಿಸಿದರು. ಭ್ರಷ್ಟಾಚಾರದ ಆರೋಪ ಬಂದಾಗ ಒಗ್ಗಟ್ಟು ಪ್ರದರ್ಶಿಸಿ ತಕ್ಕ ಉತ್ತರ ನೀಡಬೇಕು ಎನ್ನುವ ಸೂಚನೆ ನೀಡಿದರು.
ಈ ವೇಳೆ ಕೆಲ ಶಾಸಕರು ಅನುದಾನ ವಿಷಯ ಪ್ರಸ್ತಾಪಿಸಿದರು ಎನ್ನಲಾಗಿದೆ. ಅನುದಾನ ತಡೆ ಹಿಡಿದಿರುವುದರಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯ ಮಾಡಲಾಗುತ್ತಿಲ್ಲ, ಹೀಗಾದಲ್ಲಿ ನಾವು ಹೇಗೆ ಜನರ ಮುಂದೆ ಹೋಗಬೇಕು ಎಂದ ಅಳಲು ತೋಡಿಕೊಂಡರು. ಈ ಸಮಸ್ಯೆ ಪರಿಹರಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಇನ್ನು ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರಾಗಿ ಆಯ್ಕೆಯಾದ ನಂತರ ಪ್ರಥಮ ಬಾರಿಗೆ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿದ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಮತ್ತು ಸರ್ಕಾರದ ಮುಖ್ಯ ಸಚೇತಕ ಎಮ್. ಸತೀಶ್ ರೆಡ್ಡಿ ಶುಭಕೋರಿ, ಅಭಿನಂದಿಸಿದರು.
(ಇದನ್ನೂ ಓದಿ: ನಾನು ಒಮ್ಮೊಮ್ಮೆ ಸುಳ್ಳು ಹೇಳುತ್ತೇನೆ, ನೂರಕ್ಕೆ ನೂರು ಪ್ರಾಮಾಣಿಕನಲ್ಲ: ಸದನದಲ್ಲಿ ಸಿದ್ದರಾಮಯ್ಯ ಹೇಳಿಕೆ)