ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಹಾಗೂ ರಾಜ್ಯದ ರೈತರಿಗೆ ಪರಿಹಾರ ಘೋಷಿಸುವಂತೆ ಆಗ್ರಹಿಸಿ ಇಂದು ಬಿಜೆಪಿಯು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ನಗರದ ಮೈಸೂರು ಬ್ಯಾಂಕ್ ಸರ್ಕಲ್ ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರತಿಭಟನೆ ಕೈಗೊಂಡಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಬೆಂಗಳೂರಲ್ಲಿ ಸಂಚಾರ ದಟ್ಟಣೆಯುಂಟಾಗುವ ಸಾಧ್ಯತೆಯಿದೆ.
ನಗರದ ಫ್ರೀಡಂ ಪಾರ್ಕ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಪೊಲೀಸರ ಬಿಗಿ ಬಂದೋಬಸ್ತ್ ಏರ್ಪಟ್ಟಿದೆ. ಸುಮಾರು 300 ರಿಂದ 400 ಪೊಲೀಸ್ ಸಿಬ್ಬಂದಿ, 3ಕ್ಕೂ ಹೆಚ್ಚು ಕೆ.ಎಸ್.ಆರ್.ಪಿ ತುಕಡಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರಿ ಪೊಲೀಸರನ್ನು ಸಹ ನಿಯೋಜಿಸುವ ಮೂಲಕ ಪ್ರತಿಭಟನಕಾರರಿಗೆ ಮತ್ತು ವಾಹನ ಸವಾರರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಲಾಗಿದೆ.
ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಪೊಲೀಸ್ ಬಂದೋಬಸ್ತ್: ಕಾವೇರಿ ನೀರಿಗಾಗಿ ಪ್ರತಿಭಟನೆಯ ಕಾವು ಹೆಚ್ಚಾದ ಬೆನ್ನಲ್ಲೇ ತಮಿಳುನಾಡಿನ ಬಸ್ಗಳಿಗೆ ಭದ್ರತೆ ವಹಿಸಲಾಗಿದೆ. ಕರ್ನಾಟಕ-ತಮಿಳುನಾಡು ಗಡಿ ಭಾಗಗಳಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆಯಿದ್ದು ಅತ್ತಿಬೆಲೆ, ಹೊಸೂರು ರಸ್ತೆ ಭಾಗದಲ್ಲಿ ಭದ್ರತೆ ಹೆಚ್ಚುಸಲಾಗಿದೆ. ಅಲ್ಲದೇ ತಮಿಳುನಾಡು ಬಸ್ಗಳು ತಂಗುವ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಕೆಎಸ್ಆರ್ಪಿ ಪೊಲೀಸ್ ತುಕಡಿ ನಿಯೋಜಿಸಲಾಗಿದೆ.
ಮಂಡ್ಯ ಬಂದ್: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮಂಡ್ಯ ಜಿಲ್ಲಾ ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಇಂದು ಮಂಡ್ಯ ನಗರ ಹಾಗೂ ಮದ್ದೂರು ಪಟ್ಟಣ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ. ಜಿಲ್ಲಾ ಹಿತರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಶುಕ್ರವಾರ ಸಭೆ ನಡೆಸಿ ಇಂದು ಬಂದ್‌ಗೆ ಕರೆ ನೀಡಿದ್ದರು.
ಹೋಟೆಲ್, ಬೇಕರಿ, ಚಲನಚಿತ್ರ ಮಂದಿರ ಸೇರಿದಂತೆ ಎಲ್ಲ ಬಗೆಯ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.ಆಟೋ ಚಾಲಕರು, ಖಾಸಗಿ ವಾಹನ ಮಾಲೀಕರು, ಸ್ಟುಡಿಯೋ ಮಾಲೀಕರು, ಜಿಲ್ಲೆಯ ಎಲ್ಲಾ ವರ್ಗದ ಜನತೆ, ವಿದ್ಯಾರ್ಥಿ ಸಮೂಹ, ರೈತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿಗಳು, ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘಟನೆಗಳು ಸ್ವಯಂಪ್ರೇರಿತವಾಗಿ ಬಂದ್‌ನಲ್ಲಿ ಭಾಗವಹಿಸಿ ಬೆಂಬಲ ಸೂಚಿಸುತ್ತಿವೆ.
ಇನ್ನು ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಮಂಡ್ಯ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬೆಳಿಗ್ಗೆ 8ರಿಂದ ಸಂಜೆ 6ಗಂಟೆವರೆಗೂ ಬಂದ್ ಇರಲಿದೆ.
ಇದನ್ನೂ ಓದಿ: ಸಕ್ಕರೆ ನಾಡಿನಲ್ಲಿ ಕಾವೇರಿ ಕಿಚ್ಚು... ಇಂದು ಮಂಡ್ಯ ಬಂದ್‌ಗೆ ಕರೆ