ಬೆಂಗಳೂರು: ಮೈತ್ರಿ ಸರ್ಕಾರ ಬಹುಮತ ಕಳದುಕೊಂಡಿದ್ದು, ಬಹುಮತ ಸಾಬೀತುಪಡಿಸಿ ಇಲ್ಲವೇ ಕೂಡಲೇ ರಾಜೀನಾಮೆ ನೀಡಿ ಹೊರನಡೆಯಿರಿ ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಕಲಾಪವನ್ನು ಸಂಜೆ 6.30 ಕ್ಕೆ ಮುಂದೂಡಿಕೆ ಮಾಡಲಾಯಿತು.
ವಿಧಾನ ಪರಿಷತ್ನ ಬೆಳಗಿನ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಧರಣಿ ಮುಂದುವರೆಸಿದರು. ರಾಜ್ಯದಲ್ಲಿನ ಮೈತ್ರಿ ಸರ್ಕಾರ ಬಹುಮತ ಕಳದುಕೊಂಡು ಅಲ್ಪಮತಕ್ಕೆ ಕುಸಿದಿದೆ. ಸರ್ಕಾರ ಹೇಗೆ ಆಡಳಿತ ನಡೆಸಲು ಸಾಧ್ಯವೆಂದು ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದರು. ಅಲ್ಪ ಮತಕ್ಕೆ ಕುಸಿದ ಸರ್ಕಾರ ಯಾವುದೇ ಕಾರಣಕ್ಕೂ ಅಧಿಕಾರದಲ್ಲಿ ಮುಂದುವರೆಯಲು ಸಾಧ್ಯವಿಲ್ಲ. ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಆಡಳಿತ ಪಕ್ಷದ ಸದಸ್ಯರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಆಪರೇಷನ್ ಕಮಲದ ವಿರುದ್ಧ ಕಿಡಿಕಾರಿದರು. ಅಲ್ಲದೆ, ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ಉಂಟಾಗಿ ಸದನದಲ್ಲಿ ಕೋಲಾಹಲ ಸೃಷ್ಟಿಯಾಯಿತು. ಸದನ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಸಂಜೆ 6.30ವರೆಗೆ ಪರಿಷತ್ ಕಲಾಪವನ್ನ ಮುಂದೂಡಿದರು.