ಬೆಂಗಳೂರು: ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರಿಗೆ ಲಘು ಹೃದಯಾಘಾತವಾಗಿದೆ. ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ವೈದ್ಯಕೀಯ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಬುಧವಾರ ಸಂಜೆ ತಮ್ಮ ಮನೆಯಲ್ಲಿ ಜಿಮ್ ಮಾಡುತ್ತಿದ್ದಾಗ ಉದಯ್ ಗರುಡಾಚಾರ್‌ಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಲಘು ಹೃದಯಾಘಾತವಾಗಿದೆ. ಕೂಡಲೇ ಜಯನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತುರ್ತು ಚಿಕಿತ್ಸೆ ನೀಡಿದ ವೈದ್ಯರು ಆಂಜಿಯೋಪ್ಲಾಸ್ಟಿ ಮಾಡಿದ್ದಾರೆ. ಶಾಸಕರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ, ರಾತ್ರಿಯಿಂದ ವೈದ್ಯಕೀಯ ನಿಗಾದಲ್ಲಿ ಇರಿಸಿದ್ದು ಬೆಳಗ್ಗೆ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ಬಡಾವಣೆ ನಿರ್ಮಾಣ, ಜಾಗ ಗುರುತಿಸುವ ಕೆಲಸ ಆರಂಭ: ಡಿಸಿಎಂ ಡಿಕೆಶಿ
ಲಘು ಹೃದಯಾಘಾತಕ್ಕೊಳಗಾಗಿ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು,ಶೀಘ್ರ ಗುಣಮುಖರಾಗುವಂತೆ ಬಿಜೆಪಿ ನಾಯಕರು ಹಾರೈಸಿದ್ದಾರೆ.
ಶಾಸಕ ಉದಯ್ ಗರುಡಾಚಾರ್ ಅವರ ಆರೋಗ್ಯ ವಿಚಾರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷರು ಹಾಗೂ ಶಾಸಕ ಸಿ.ಕೆ ರಾಮಮೂರ್ತಿ ಅವರು ಜತೆಗಿದ್ದರು.