ಬೆಂಗಳೂರು : ಒಂದು ದಿನದ ಪ್ರವಾಸಕ್ಕಾಗಿ ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಧ್ಯಾಹ್ನ ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಚಿತ್ರದುರ್ಗದ ಶ್ರೀ ಮುರುಘಾ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಸಂಜೆ ದೆಹಲಿಗೆ ವಾಪಸ್ಸಾಗಲಿದ್ದಾರೆ. ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ನಾಳೆ ಬೆಳಗ್ಗೆ 11.50ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು,12.30ಕ್ಕೆ ಯಲಹಂಕದ ರಮಾಡ ಹೋಟೆಲ್ನಲ್ಲಿ ನಡೆಯುತ್ತಿರುವ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ವರ್ಗದ ಶಿಬಿರದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1.30ರವರೆಗೆ ವಿವಿಧ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 1.30ರಿಂದ 2.15ರವರೆಗೆ ಸಮಯವನ್ನು ಕಾಯ್ದಿರಿಸಲಾಗಿದೆ. ರಾಜ್ಯ ರಾಜಕೀಯ ವಿಷಯಗಳ ಬಗ್ಗೆ ರಾಜ್ಯದ ನಾಯಕರ ಸಭೆ ನಡೆಸುವ ಸಾಧ್ಯತೆ ಇದೆ. ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸುವ ಸಾಧ್ಯತೆ ಇದೆ. ಮಧ್ಯಾಹ್ನ 2.45ಕ್ಕೆ ಜಕ್ಕೂರು ಏರೋಡ್ರಮ್ನಿಂದ ಕಾಪ್ಟರ್ ಮೂಲಕ ಜೆಪಿ ನಡ್ಡಾ ಚಿತ್ರದುರ್ಗಕ್ಕೆ ತೆರಳಲಿದ್ದಾರೆ.
ಸಂಜೆ 4 ಗಂಟೆಗೆ ಮುರುಘಾ ಮಠಕ್ಕೆ ತೆರಳಿ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಭೇಟಿಯಾಗಲಿದ್ದಾರೆ. 5.30ಕ್ಕೆ ಚಿತ್ರದುರ್ಗದಿಂದ ಹೊರಟು ಸಂಜೆ 6.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 7.40ರ ವಿಮಾನದ ಮೂಲಕ ನವದೆಹಲಿಗೆ ವಾಪಸ್ಸಾಗಲಿದ್ದಾರೆ.
ಇದನ್ನೂ ಓದಿ; ರಾಜ್ಯದಲ್ಲಿ ಗಲಭೆಯಾಗದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ : ಸಿಎಂ ಬೊಮ್ಮಾಯಿ