ಬೆಂಗಳೂರು: ಗ್ರಾಮ ಪಂಚಾಯಿತಿಯಿಂದ ಹಿಡಿದು ಲೋಕಸಭೆ ಚುನಾವಣೆವರೆಗೂ ಬಿಜೆಪಿ ಅಧಿಕಾರ ಹಿಡಿಯಬೇಕು. ಇದಕ್ಕಾಗಿ ಈಗಿನಿಂದಲೇ ಕೆಲಸ ಮಾಡಲು ಮುಂದಾಗಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ದೆಹಲಿಯಿಂದಲೇ ವರ್ಚುವಲ್ ಮೂಲಕ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲೂ ಕಮಲ ಅರಳಿಸಬೇಕಾದರೆ ಕಾರ್ಯಕರ್ತರು ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು. ಅದೇ ರೀತಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ನಗರಸಭೆ, ಪಾಲಿಕೆಗಳು, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲೂ ತಮ್ಮ ಪಕ್ಷ ಅಧಿಕಾರದ ಚುಕ್ಕಾಣೆ ಹಿಡಿಯಬೇಕಾದರೆ ಕಾರ್ಯಕರ್ತರ ಶ್ರಮ ಅಗತ್ಯ ಎಂದರು.
ರಾಜ್ಯದಲ್ಲಿ ಯಾವ ಯಾವ ಕ್ಷೇತ್ರಗಳಲ್ಲಿ ಪಕ್ಷ ಹಿನ್ನಡೆ ಇದೆಯೋ ಅಂತಹ ಕ್ಷೇತ್ರಗಳಲ್ಲಿ ಹೆಚ್ಚು ಸಂಘಟನೆಯನ್ನು ಚುರುಕುಗೊಳಿಸಬೇಕು. ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲವೆಂದು ಹೇಳುತ್ತಿದ್ದ ಕಡೆಯೂ ಇಂದು ನಾವು ಗೆಲುವು ಸಾಧಿಸಿದ್ದೇವೆ. ರಾಜ್ಯದಲ್ಲಿ ಪಕ್ಷದ ಸಂಘಟನೆ ಪ್ರಬಲವಾಗಿದ್ದು, ಕೆಲವು ಜಿಲ್ಲೆಗಳ ಕಡೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಹೇಳಿದರು.
ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿ, ಎರಡು ಮೂರು ವರ್ಷಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಕ್ಷದ ಕಾರ್ಯಾಲಯಗಳನ್ನು ಪ್ರಾರಂಭಿಸುವ ಯೋಜನೆ ಹಾಕಿಕೊಂಡಿದ್ದೇವೆ. ಇದಕ್ಕಾಗಿ ಭೂಮಿ ಖರೀದಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ತಿಳಿಸಿದರು.
ಇದೀಗ ವಿಜಾಪುರ, ರಾಯಚೂರು, ಬಳ್ಳಾರಿ, ಬೀದರ್, ಬಾಗಲಕೋಟೆ, ಕೋಲಾರ, ಚಾಮರಾಜನಗರ ಮತ್ತು ತಿಪಟೂರಿನಲ್ಲಿ ಕಾರ್ಯಾಲಯ ಆರಂಭವಾಗುತ್ತಿವೆ. ಮುಂದಿನ ದಿನಗಳಲ್ಲಿ ಹಾವೇರಿ, ರಾಮನಗರ, ಉತ್ತರ ಕನ್ನಡ ಸೇರಿದಂತೆ ಒಟ್ಟು 11 ಕಡೆ ಕಾರ್ಯಾಲಯಗಳನ್ನು ಪ್ರಾರಂಭಿಸಲಾಗುವುದು. ಈ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಇರುವ ಕಾರಣ ಭೂಮಿ ಖರೀದಿ ವಿಳಂಬವಾಗಿದೆ. ಒಂದೆರಡು ತಿಂಗಳಲ್ಲಿ ಇದು ಕೂಡ ಪೂರ್ಣಗೊಳ್ಳಲಿದ್ದು, ಎರಡು- ಮೂರು ವರ್ಷಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ನಮ್ಮ ಕಾರ್ಯಾಲಯಗಳು ಪ್ರಾರಂಭವಾಗಲಿವೆ ಎಂದು ಮಾಹಿತಿ ನೀಡಿದರು.