ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿಗೆ ಪ್ರತಿಕ್ರಿಯೆ ನೀಡಲು ನಳಿನ್ ಕುಮಾರ್ ಕಟೀಲ್ ನಿರಾಕರಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು. ರಾಜಕೀಯದಲ್ಲಿ ಇವೆಲ್ಲ ಸಹಜ. ನಾನು ಅವರನ್ನು ಕಾಡಿಗೆ ಕಳುಹಿಸಬೇಕು ಎಂದು ಹೇಳಿದ್ದಕ್ಕೆ ಅವರು ಹಾಗೆ ಪ್ರತಿಕ್ರಿಯಿಸಿದ್ದಾರೆ. ಅವರ ವಾಗ್ದಾಳಿಗೆ ನಮ್ಮ ಪಕ್ಷದ ವಕ್ತಾರ ಗಣೇಶ್ ಕಾರ್ಣಿಕ್ ಮೂಲಕ ಉತ್ತರ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಕಟೀಲು ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದರು.
ತಮ್ಮ ಪಕ್ಷ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸ ಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನನ್ನು ಇನ್ನು ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ. ಅಪ್ರಬುದ್ಧ ವ್ಯಕ್ತಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಕಾರ್ಣೀಕ್ ಪ್ರತಿಕ್ರಿಯೆ ನೀಡಿ ಸಿದ್ದರಾಮಯ್ಯ ಅವರಿಂದ ಇಂತಹ ಕೆಳಮಟ್ಟದ ಹೇಳಿಕೆ ನಿರೀಕ್ಷಿಸಿರಲ್ಲ ಎಂದು ಎದಿರೇಟು ಕೊಟ್ಟಿದ್ದರು.