ಬೆಂಗಳೂರು: ಬಿಜೆಪಿ ಕಾರ್ಯಕರ್ತರ ದಿಢೀರ್ ಬಂಧನ ನಡೆಯುತ್ತಿದ್ದು, ಗೃಹ ಸಚಿವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಕಾರ್ಯಕರ್ತರು ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಮಾಜಿ ಡಿಸಿಎಂ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬಿಜೆಪಿ ನಾಯಕರ ಮೇಲೆ ಕಾಂಗ್ರೆಸ್ ಸರ್ಕಾರ ದ್ವೇಷ ಪೂರಿತ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಡಿಸಿಎಂ ಆರ್.ಅಶೋಕ್, ಸೋಶಿಯಲ್ ಮೀಡಿಯಾ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ರಾಜ್ಯದ ಮೈತ್ರಿ ಸರ್ಕಾರ ಪ್ರಯತ್ನಿಸುತ್ತಿದೆ.ಪೊಲೀಸ್ ದೌರ್ಜನ್ಯ ಮಿತಿ ಮೀರುತ್ತಿದೆ,ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚುವ ನೀತಿ ಅನುಸರಿಸುತ್ತಿದೆ.ಪ್ರಧಾನಿಯವರನ್ನು ಗುಂಡಿಟ್ಟುಕೊಲ್ಲಬೇಕು ಎಂದಿದ್ದ ಬೇಳೂರು ಗೋಪಾಲಕೃಷ್ಣ ವಿರುದ್ದ ಇದುವರೆಗೂ ಕ್ರಮ ಆಗಿಲ್ಲ.ಆದರೆ ಪತ್ರಕರ್ತರನ್ನು ಮಾತ್ರ ಏಕಾಏಕಿ ಬಂಧಿಸಿ ಜೈಲಿಗಟ್ಟುತ್ತಿದ್ದಾರೆ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಎಂಎಲ್ ಸಿ ಅಶ್ವತ್ ನಾರಾಯಣ್, ರಾಜ್ಯದಲ್ಲಿ ಗೃಹ ಸಚಿವರು ಅಘೋಷಿತ ತುರ್ತುಪರಿಸ್ಥಿತಿ ಹೇರಿದ್ದಾರೆ. ಗೃಹ ಸಚಿವರ ವಿರುದ್ಧ ಯಾರಾದರು ಮಾತನಾಡಿದರೆ ಅವರನ್ನು ಬಂಧಿಸಲಾಗುತ್ತಿದೆ ಎಂದರು.