ಬೆಂಗಳೂರು: ಬಿಜೆಪಿ ಎಸ್ಸಿ ಮೋರ್ಚಾದ ರಾಷ್ಟ್ರೀಯ ಘಟಕವನ್ನು ಪುನರ್ ರಚಿಸಲಾಗಿದೆ. ಡಿಸಿಎಂ ಗೋವಿಂದ ಕಾರಜೋಳ ಸೇರಿದಂತೆ ರಾಜ್ಯದ ಐದು ಪ್ರಮುಖರಿಗೆ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ಒಂದೇ ದಿನಕ್ಕೆ 3082 ಮಂದಿಗೆ ಸೋಂಕು.. 12 ಮಂದಿ ಬಲಿ
ಎಸ್ಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಲಾಲಾ ಸಿಂಹ ಆರ್ಯ ಅವರ ನೇತೃತ್ವದಲ್ಲಿ ಮುಂದಿನ ಮೂರು ವರ್ಷಗಳ ಕಾಲ ದೇಶಾದ್ಯಂತ ಪರಿಶಿಷ್ಟ ಸಮುದಾಯಗಳ ಸಂಘಟನೆಯ ದೃಷ್ಟಿಯಿಂದ ಕರ್ನಾಟಕದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಅರಣ್ಯ ಸಚಿವ ಅರವಿಂದ ಲಿಂಬಾವಳಿ, ಪಶು ಸಂಗೋಪನೆ ಇಲಾಖೆ ಸಚಿವ ಪ್ರಭು ಚೌಹಾಣ್ ಹಾಗೂ ಮೀನುಗಾರಿಕೆ ಇಲಾಖೆ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಸಚಿವ ಅಂಗಾರ ಇವರನ್ನು ರಾಷ್ಟ್ರೀಯ ಕಾರ್ಯಕಾರಿಣಿ ಖಾಯಂ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ.
ರಾಷ್ಟ್ರೀಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತರಾಗಿ ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಕೋಲಾರದ ವೆಂಕಟೇಶ ಮೌರ್ಯ ಅವರನ್ನು ನೇಮಿಸಲಾಗಿದೆ ಎಂದು ಪರಿಶಿಷ್ಟ ಜಾತಿಯ ರಾಷ್ಟ್ರೀಯ ಅಧ್ಯಕ್ಷ ಲಾಲಾ ಸಿಂಹ ಆರ್ಯ ಅವರು ತಿಳಿಸಿದ್ದಾರೆ.
ಎಸ್ಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿಗೆ ನೇಮಕಗೊಂಡ ರಾಜ್ಯದ ಎಲ್ಲಾ ಪ್ರಮುಖರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದಿಸಿದ್ದಾರೆ.