ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಸಂಗಮದಿಂದ ಪಾದಯಾತ್ರೆ ಆರಂಭಿಸುವ ವೇಳೆ ಕಾವೇರಿ ನದಿಗೆ ಪೂಜೆ ಸಲ್ಲಿಸುವಾಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಯತಪ್ಪಿದ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿರುವ ಬಿಜೆಪಿ 'ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ' ಎಂದು ವ್ಯಂಗ್ಯವಾಡಿದೆ.
ಸುಳ್ಳಿನಜಾತ್ರೆ ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಾದಯಾತ್ರೆಯನ್ನು ಟೀಕಿಸಿದೆ. ಜನರನ್ನು ಮರುಳು ಮಾಡಲು ಕಾಂಗ್ರೆಸ್ ರಾಜಕೀಯ ಪ್ರೇರಿತ ಪಾದಯಾತ್ರೆ ಕೈಗೊಂಡಿದೆ. ಆದರೆ, ಜನರನ್ನು ಪದೇಪದೆ ಮರುಳು ಮಾಡಲು ಸಾಧ್ಯವಿಲ್ಲ.
ತನ್ನ ಐದು ವರ್ಷದ ಅವಧಿಯಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕೂಡ ಕಾಂಗ್ರೆಸ್ ಸಮರ್ಪಕವಾಗಿ ಸಲ್ಲಿಸಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಬದ್ಧತೆ ಇಲ್ಲ ಎಂದು ವಾಗ್ದಾಳಿ ನಡೆಸಿದೆ.
ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡಿ ಕೆ ಶಿವಕುಮಾರ್ ನೀರಾವರಿ ಸಚಿವರಾಗಿದ್ದರು. ಆಗಲೂ ಈ ಯೋಜನೆ ಬಗ್ಗೆ ಕ್ರಮವಹಿಸಲಿಲ್ಲ. ಕಳೆದ ಮೂರು ವರ್ಷಗಳಿಂದಲೂ ಇದರ ಬಗ್ಗೆ ಚಕಾರವೆತ್ತಿರಲಿಲ್ಲ. ಈಗ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜಕೀಯ ಪಾದಯಾತ್ರೆ ಕೈಗೊಂಡಿದ್ದಾರೆ ಎಂದು ಡಿ ಕೆ ಶಿವಕುಮಾರ್ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಕಾಂಗ್ರೆಸ್ಸಿಗರಿಗೆ ತಮ್ಮ ಅವಧಿಯಲ್ಲಿ ಮೇಕೆದಾಟು ಯೋಜನೆಗಾಗಿ ಯಾವುದೇ ಕೆಲಸ ಮಾಡಿಲ್ಲವೆನ್ನುವ ಅಪರಾಧ ಪ್ರಜ್ಞೆ ಕಾಡುತ್ತಿದೆ. ಕಾಂಗ್ರೆಸ್ ಪಕ್ಷ ಯಾವುದೇ ನೀರಾವರಿ ಯೋಜನೆಗಳ ಬಗ್ಗೆ ಬದ್ಧತೆಯಿಂದ ಕೆಲಸ ಮಾಡಿಲ್ಲ. ಅದಕ್ಕಾಗಿ ಈಗ ಪಾದಯಾತ್ರೆ ಹೆಸರಿನಲ್ಲಿ ಸುಳ್ಳಿನಜಾತ್ರೆ ಮಾಡುತ್ತಿದೆ ಎಂದು ಹರಿಹಾಯ್ದಿದೆ.