ಬೆಂಗಳೂರು: ಫಾರ್ಟಿ ಪರ್ಸೆಂಟೇಜ್ ಕಮೀಶನ್ ಪಡೆಯುವ ಬಿಜೆಪಿ ಸರ್ಕಾರವನ್ನು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ 40 ಸೀಟುಗಳಿಗೆ ಸೀಮಿತಗೊಳಿಸುವುದು ಕಾಂಗ್ರೆಸ್ ಪಕ್ಷದ ಚುನಾವಣೆ ಟಾರ್ಗೆಟ್ ಆಗಿದೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಆದಾಯ ತೆರಿಗೆ, ಇಡಿ ಮತ್ತು ಸಿಬಿಐಗಳನ್ನು ದುರ್ಬಳಕೆ ಮಾಡಿಕೊಳ್ಳದಿದ್ದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಅವರು ಈ ಟಿವಿ ಭಾರತಕ್ಕೆ ನೀಡಿದ ಸಂದರ್ಶನದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಜೆಡಿಎಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನ ಶಾಸಕರ ಅಭಿಪ್ರಾಯವನ್ನಾಧರಿಸಿ ಅತ್ಯಂತ ಪ್ರಜಾಸತ್ತಾತ್ಮಕ ಮಾದರಿಯಲ್ಲಿ ಆಯ್ಕೆ ಮಾಡಲಾಗುತ್ತದೆ. ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿತನಲ್ಲ. ಮುಖ್ಯಮಂತ್ರಿಯಲ್ಲ ಸಚಿವ ಸ್ಥಾನ ಸಹ ನನಗೆ ಬೇಡ. ಟಿಕೆಟ್ ಹಂಚಿಕೆ ತಪ್ಪಿನಿಂದ ಬಿಜೆಪಿಯಲ್ಲಿ ಸುನಾಮಿ ಎದ್ದಿದೆ ಎಂದರು.
ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರಗೊಂಡು ಕಾಂಗ್ರೆಸ್ ಪಕ್ಷವನ್ನು ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಗೆಲ್ಲಲಿದ್ದಾರೆ. ಭಾರತದ ತ್ರಿವರ್ಣ ಧ್ವಜವು ರಾಷ್ಟ್ರಧ್ವಜವಲ್ಲವೆಂದು ಹೇಳುವ ನಾಯಕರು ಬಿಜೆಪಿಯಲ್ಲಿದ್ದಾರೆ. ಹಿಂದುತ್ವದ ಅಜೆಂಡಾ ಹೊಂದಿರುವ ಬಿಜೆಪಿಯಲ್ಲಿ ಕೆಲವರು ವೈಟ್ ಕಾಲರ್ ಭಯೋತ್ಪಾದಕರಿದ್ದು ಇದು ದೇಶದ ಸಾಮರಸ್ಯಕ್ಕೆ ಮಾರಕವಾಗಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿಯ ಆಟ ಈ ವಾರಿ ಚುನಾವಣೆಯಲ್ಲಿ ನಡೆಯುವುದಿಲ್ಲ. ಈ ಹಿಂದೆ 2013 ಮತ್ತು 2018ರಲ್ಲಿಯೂ ಮೋದಿ ಮತ್ತು ಶಾ ಜೋಡಿ ಅಬ್ಬರದ ಚುನಾವಣೆ ಪ್ರಚಾರ ನಡೆಸಿದರೂ ಬಿಜೆಪಿ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.
ಇದನ್ನೂ ಓದಿ: ಮೋದಿ, ಅಮಿತ್ ಶಾ ಗಿಂತ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ದೊಡ್ಡ ನಾಯಕರು: ಬಿ ಕೆ ಹರಿಪ್ರಸಾದ್