ಬೆಂಗಳೂರು: ಕರ್ತವ್ಯನಿರತ ಪೊಲೀಸರಿಗೆ ಬಾಡಿ ಕ್ಯಾಮರಾ ಅಳವಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲೆ ಹಾಗೂ ವಿವರ ಸಲ್ಲಿಸಲು, ಒಂದು ವಾರ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮನವಿ ಮಾಡಿದೆ.
ಪೊಲೀಸರಿಗೆ ಬಾಡಿ ಕ್ಯಾಮೆರಾ ಅಳವಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮನವಿ ಮಾಡಿ, ಬಾಡಿ ಕ್ಯಾಮರಾ ಖರೀದಿ ಹಾಗೂ ಅಳವಡಿಕೆಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಕಾರ್ಯಾದೇಶ ಹಾಗೂ ಇತರೆ ದಾಖಲೆಗಳನ್ನು ತಾಂತ್ರಿಕ ಸಮಸ್ಯೆಯಿಂದಾಗಿ ಇ-ಫೈಲಿಂಗ್ ಮೂಲಕ ಸಲ್ಲಿಸಲು ಸಾಧ್ಯವಾಗಲಿಲ್ಲ. ಹೀಗಾಗಿ, ದಾಖಲೆ ಮತ್ತು ವಿವರ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಇದನ್ನೂ ಓದಿ: ಅಂಬೇಡ್ಕರ್ಗೆ ಅಪಮಾನ ಆರೋಪ ಪ್ರಕರಣ: ರಾಯಚೂರು ಜಿಲ್ಲಾ ನ್ಯಾಯಾಧೀಶರ ಸ್ಪಷ್ಟನೆ ಹೀಗಿದೆ..
ಮನವಿ ಪರಿಗಣಿಸಿದ ಪೀಠ ವಿವರ ಸಲ್ಲಿಸಲು ನಿರ್ದೇಶಿಸಿ, ವಿಚಾರಣೆಯನ್ನು ಫೆಬ್ರವರಿ 7ಕ್ಕೆ ಮುಂದೂಡಿತು. 2021ರ ಡಿಸೆಂಬರ್ 22ರಂದು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪೊಲೀಸರಿಗೆ ಬಾಡಿ ಕ್ಯಾಮರಾ ಅಳವಡಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ವಿವರ ಹಾಗೂ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು.
ಪ್ರಕರಣದ ಹಿನ್ನೆಲೆ: ಕಾನೂನು ಸುವ್ಯವಸ್ಥೆ ಹಾಗೂ ಟ್ರಾಫಿಕ್ ಪೊಲೀಸರು ಬಾಡಿ ಕ್ಯಾಮರಾ ಧರಿಸುವುದರಿಂದ ಸಿಬ್ಬಂದಿಯ ಭ್ರಷ್ಟಾಚಾರ ನಿಯಂತ್ರಿಸಬಹುದು. ಹಿರಿಯ ಅಧಿಕಾರಿಗಳು ತಮ್ಮ ಸಿಬ್ಬಂದಿಯ ಕರ್ತವ್ಯ ನಿರ್ವಹಣೆಯನ್ನು ಠಾಣೆಯಿಂದಲೇ ಮೇಲ್ವಿಚಾರಣೆ ಮಾಡಬಹುದು. ಕಾನೂನು ಉಲ್ಲಂಘನೆ ಪ್ರಕರಣಗಳಲ್ಲಿ ಪ್ರಶ್ನಿಸಿದಾಗ ತಪ್ಪಿತಸ್ಥರೇ ಪೊಲೀಸರ ಮೇಲೆ ತಿರುಗಿ ಬಿದ್ದಿರುವ ಘಟನೆಗಳು ಸಾಕಷ್ಟಿವೆ. ಇಂತಹ ಸಂದರ್ಭದಲ್ಲಿ ಬಾಡಿ ಕ್ಯಾಮರಾ ಧರಿಸುವುದರಿಂದ ಪೊಲೀಸರಿಗೂ ರಕ್ಷಣೆ ಸಿಗಲಿದೆ. ಆದ್ದರಿಂದ ಬೆಂಗಳೂರು ನಗರ ಪೊಲೀಸರಿಗಾಗಿ ಖರೀದಿಸಿರುವ 50 ಬಾಡಿ ಕ್ಯಾಮರಾ ಬಳಸುವಂತೆ ನಿರ್ದೇಶಿಸಬೇಕು. ರಾಜ್ಯಾದ್ಯಂತ ಪೊಲೀಸರ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಅನುಕೂಲವಾಗುವಂತೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಾಡಿ ಕ್ಯಾಮರಾ ಖರೀದಿಸಲು ಮತ್ತು ಪೊಲೀಸರಿಗೆ ಅಳವಡಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ