ಬೆಂಗಳೂರು: ಕೇಂದ್ರ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ನವದೆಹಲಿಗೆ ತೆರಳುತ್ತಿದ್ದು, ಪಕ್ಷದ ಅಧಿಕೃತ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳಲಿರುವ ಮಾಜಿ ಸಿಎಂ ಯಡಿಯೂರಪ್ಪ, ಮಧ್ಯಾಹ್ನ 2 ಗಂಟೆಗೆ ಪಕ್ಷದ ನಾಯಕರು ಮತ್ತು ಕೇಂದ್ರ ಸಚಿವರ ಜೊತೆಗಿನ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಇಂದು ರಾತ್ರಿ ಕರ್ನಾಟಕ ಭನವದಲ್ಲಿಯೇ ವಾಸ್ತವ್ಯ ಹೂಡಲಿರುವ ಯಡಿಯೂರಪ್ಪ ವಾಪಸ್ ಬರುವ ದಿನಾಂಕವನ್ನು ಕಾಯ್ದಿರಿಸಿಕೊಂಡಿದ್ದಾರೆ. ಯಡಿಯೂರಪ್ಪ ಇದೀಗ ಪಕ್ಷದ ಅತ್ಯುನ್ನತ ಸಮಿತಿಯ ಸದಸ್ಯರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಹೆಚ್ಚಿನ ಪ್ರಭಾವ ಬೀರಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಷಯಗಳಲ್ಲಿ ಹೈಕಮಾಂಡ್ ಜೊತೆ ಮಾತುಕತೆ ನಡೆಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಯಡಿಯೂರಪ್ಪ ದೆಹಲಿ ಪ್ರವಾಸ ಮಹತ್ವ ಪಡೆದುಕೊಂಡಿದೆ.
ಸಂಸದೀಯ ಮಂಡಳಿ ಸದಸ್ಯರಾಗಿ ನೇಮಕವಾದ ಬಳಿಕ ಇದೇ ಮೊದಲ ಬಾರಿಗೆ ದೆಹಲಿ ಪ್ರವಾಸ ಕೈಗೊಳ್ಳುತ್ತಿರುವ ಬಿಎಸ್ವೈ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
(ಇದನ್ನೂ ಓದಿ: ಬಿಜೆಪಿಯಲ್ಲಿ ಯಡಿಯೂರಪ್ಪಗೆ ಉನ್ನತ ಸ್ಥಾನಮಾನ.. ಹೈಕಮಾಂಡ್ನಿಂದ ಡ್ಯಾಮೇಜ್ ಕಂಟ್ರೋಲ್ ಹೆಜ್ಜೆ)