ಯಲಹಂಕ : ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ನಿರುತ್ಸಾಹ ತೋರುತ್ತಿದೆ ಎಂದು ಆರೋಪಿಸಿ ಪಕ್ಷದ ರಾಜ್ಯ ಕಾರ್ಯದರ್ಶಿ ವೀರಣ್ಣ ಸೇರಿ ಹಲವು ರಾಜ್ಯ ಮುಖಂಡರು ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ವೀರಣ್ಣ, "ನಾನು ಸೇರಿದಂತೆ ಪಕ್ಷದ ಹಲವು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದೇವೆ. ರಾಜ್ಯದಲ್ಲಿ ಬಿಎಸ್‌ಪಿ ಪಕ್ಷ ಸಂಘಟನೆ ಹಾಗೂ ನೆಲೆ ಕಂಡುಕೊಳ್ಳುವಲ್ಲಿ ವಿಫಲವಾಗಿದೆ. ಪಕ್ಷಕ್ಕೆ ದುಡಿಸಿಕೊಳ್ಳಲು ಮಾತ್ರ ನಮ್ಮನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ" ಎಂದು ಆಕ್ರೋಶ ಹೊರಹಾಕಿದರು.
ಬಿಎಸ್ಪಿಗೆ ರಾಜ್ಯದಲ್ಲಿ ನೆಲೆ ಇಲ್ಲದೇ ಇರುವುದರಿಂದ ರಾಜೀನಾಮೆ ಸಲ್ಲಿಸಿದ್ದೇವೆ. ರಾಜ್ಯಾದ್ಯಂತ ಬಿಎಸ್‌ಪಿ ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ಕರ್ನಾಟಕದಲ್ಲಿ ನೆಲೆ ಕಂಡುಕೊಳ್ಳಲು ಪಕ್ಷ ವಿಫಲವಾಗಿದೆ. ಚುನಾವಣೆಗೆ ಇದುವರೆಗೂ ಎಲ್ಲಿಯೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡದೇ ಇರುವುದರಿಂದ ಬಿಎಸ್‌ಪಿ ನಾಯಕರು ಪಕ್ಷ ತೊರೆಯುತ್ತಿದ್ದಾರೆ ಎಂದು ತಿಳಿಸಿದರು.
ಕೂಡ್ಲಿಗಿ ಮಾಜಿ ಶಾಸಕ ಕಾಂಗ್ರೆಸ್ ಸೇರ್ಪಡೆ: ಕೂಡ್ಲಿಗಿ ಮಾಜಿ ಶಾಸಕ ಎನ್.ವೈ.ಗೋಪಾಲಕೃಷ್ಣ ನಿನ್ನೆ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ ಡಿ.ಕೆ.ಶಿವಕುಮಾರ್ ಅವರು ಪಕ್ಷದ ಬಾವುಟ ನೀಡಿ, ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಇವರೊಂದಿಗೆ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದಾರೆ.
ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ಎನ್.ವೈ.ಗೋಪಾಲಕೃಷ್ಣ, "ನನಗೆ ಪಕ್ಷದ ದೊಡ್ಡ ಬೆಂಬಲ ಇತ್ತು. ನನ್ನ ತಾಯಿ ಜಿಲ್ಲಾ ಪಂಚಾಯಿತಿಗೆ ಚುನಾವಣೆಗೆ ನಿಲ್ಲುವಾಗ ಕಾಂಗ್ರೆಸ್ನಿಂದ ನಿಲ್ಲುತ್ತೇನೆ ಎಂದಿದ್ದರು. ಅಂದು ಅವರನ್ನು ನಾನು ಮತ್ತು ನನ್ನ ಅಣ್ಣ ಸೇರಿ ಗೆಲ್ಲಿಸಿಕೊಂಡಿದ್ದೆವು. 1997ರಲ್ಲಿ ನನಗೆ ಡಿಕೆಶಿ ಟಿಕೆಟ್ ಕೊಡಿಸಿದರು. 2013ರಲ್ಲಿ ಜಾತಿ ಲೆಕ್ಕಾಚಾರದ ಹಿನ್ನೆಲೆಯಲ್ಲಿ ನನ್ನನ್ನು ಸೋಲಿಸುವ ಕಾರ್ಯ ನಡೆಯಿತು ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಾಂಗ್ರೆಸ್ ಕಟ್ಟಲು ಅವಿರತವಾಗಿ ಶ್ರಮಿಸಿದ್ದಾರೆ. ನಾನು ಕಳೆದುಕೊಂಡಿದ್ದ ಜಾಗಕ್ಕೆ ವಾಪಸ್ ಬಂದು ಹುಡುಕಿ ಗೌರವ ಪಡೆದಿದ್ದೇನೆ. ನನಗೆ ಆಶೀರ್ವಾದ ಮಾಡಿದರೆ ಇಡೀ ಚಿತ್ರದುರ್ಗ ಜಿಲ್ಲೆಯ ಜತೆ ಬಳ್ಳಾರಿ ಜಿಲ್ಲೆಯಲ್ಲೂ ಓಡಾಡಿ ಕೆಲಸ ಮಾಡುತ್ತೇನೆ. ಕೂಡ್ಲಗಿ ಕ್ಷೇತ್ರದ ಕಾರ್ಯಕರ್ತರಿಗೆ ಕರೆ ಕೊಟ್ಟ ಅವರು, ನಾನು ಅಲ್ಲಿ ಬಿಜೆಪಿ ಶಾಸಕನಾಗಿ ಕೆಲಸ ಮಾಡಿದ್ದೆ. ಇದೀಗ ಅಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ : ರಾಜಕೀಯಕ್ಕೆ ಧುಮುಕಲು ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿದ ಅಧಿಕಾರಿ