ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿನಗರ ಕ್ಷೇತ್ರಗಳ ಉಪಚುನಾವಣೆ ದಿನಾಂಕ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್ನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.
ಶಿರಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಬಿ. ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ತಮ್ಮ ಪಕ್ಷದ ಹಿಡಿತದಲ್ಲಿದ್ದ ಕ್ಷೇತ್ರವನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜೆಡಿಎಸ್ಗೆ ಎದುರಾಗಿದೆ.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆ ಶಿರಾ ಕ್ಷೇತ್ರದ ಜೆಡಿಎಸ್ ಮುಖಂಡರ ಜೊತೆ ಅಭ್ಯರ್ಥಿಯ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಪ್ರಾದೇಶಿಕ ಪಕ್ಷದ ಶಕ್ತಿ ಉಳಿಸಿಕೊಳ್ಳುವ ಜವಾಬ್ದಾರಿ ನಿಮ್ಮ (ಕಾರ್ಯಕರ್ತರ) ಮೇಲಿದೆ ಎಂದು ಇತ್ತೀಚೆಗೆ ನಡೆದ ಸಭೆಯಲ್ಲಿ ಕುಮಾರಸ್ವಾಮಿ ತಿಳಿಸಿದ್ದು, ಈಗಾಗಲೇ ಆಕಾಂಕ್ಷಿಗಳ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ನಾಳೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಅದೇ ರೀತಿ, ರಾಜರಾಜೇಶ್ವರಿನಗರ ಕ್ಷೇತ್ರದ ಉಪಚುನಾವಣೆಗೂ ಅಭ್ಯರ್ಥಿಯನ್ನು ಹುಡುಕುವ ಕೆಲಸ ವರಿಷ್ಠರು ಆರಂಭಿಸಿದ್ದಾರೆ. ಈ ಎರಡೂ ಕ್ಷೇತ್ರಗಳು ಜೆಡಿಎಸ್ಗೆ ಮಹತ್ವದ್ದಾಗಿದ್ದು, ಜೆಡಿಎಸ್ ವರಿಷ್ಠರ ನಡೆ ಕುತೂಹಲ ಮೂಡಿಸಿದೆ.