ಬೆಂಗಳೂರು : ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಸರ್ಕಾರ ತಮ್ಮ ಇಡೀ ಮಂತ್ರಿ ಮಂಡಲವನ್ನೇ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿಸಿದೆ.
ಎರಡು-ಮೂರು ಮಂದಿ ಸಚಿವರನ್ನು ಹೊರತುಪಡಿಸಿದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಬಹುತೇಕ ಸಚಿವರು ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಹಾಗಾಗಿ, ಆಡಳಿತದ ಶಕ್ತಿಕೇಂದ್ರವಾದ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಸಚಿವರು ಇಲ್ಲದೆ ಬಣಗುಡುತ್ತಿದೆ. ಜೊತೆಗೆ ಸಚಿವರು ಇಲ್ಲದ ಕಾರಣಕ್ಕೆ ತಮ್ಮ ತಮ್ಮ ಕ್ಷೇತ್ರದ ಅಹವಾಲು ತೆಗೆದುಕೊಂಡು ಬರುವ ಜನರ ಸಂಖ್ಯೆಯೂ ಸಹ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ವಿರಳವಾಗಿದೆ.
ಬೆರಳೆಣಿಕೆಯಷ್ಟು ಸಚಿವರು ಮಾತ್ರ ಆಗಾಗ ವಿಧಾನಸೌಧಕ್ಕೆ ಬಂದು ಹೋಗುತ್ತಿದ್ದಾರೆ. ಅದರಲ್ಲಿ ಪ್ರಮುಖವಾಗಿ ಕಂದಾಯ ಸಚಿವ ಆರ್. ಅಶೋಕ್, ಉಮೇಶ್ ಕತ್ತಿ, ಡಾ. ಸಿ ಎನ್ ಅಶ್ವತ್ಥ್ ನಾರಾಯಣ ಅವರು ನಿನ್ನೆಯಿಂದ ವಿಧಾನಸೌಧಕ್ಕೆ ಬರುತ್ತಿದ್ದಾರೆ. ಸಚಿವ ಮುರುಗೇಶ್ ನಿರಾಣಿ ಅವರು ನಿನ್ನೆ ವಿಧಾನಸೌಧಕ್ಕೆ ಬಂದು ಸುದ್ದಿಗೋಷ್ಠಿ ನಡೆಸಿ ಮತ್ತೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಅದೇ ರೀತಿ ಬಹುತೇಕ ಸಚಿವರು ಉಪಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ.
ಕೆಲವು ಸಚಿವರು ತಮ್ಮ ಕ್ಷೇತ್ರಗಳ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಸಚಿವರಾದ ಡಾ. ಕೆ ಸುಧಾಕರ್, ಕೆ. ಗೋಪಾಲಯ್ಯ, ಎಸ್ ಟಿ ಸೋಮಶೇಖರ್, ಬೈರತಿ ಬಸವರಾಜ್, ಸಿ ಸಿ ಪಾಟೀಲ್, ಶಶಿಕಲಾ ಜೊಲ್ಲೆ, ಶ್ರೀರಾಮುಲು, ಗೋವಿಂದ ಕಾರಜೋಳ, ಕೋಟಾ ಶ್ರೀನಿವಾಸ ಪೂಜಾರಿ, ಬಿ.ಸಿ.ಪಾಟೀಲ್, ನಾರಾಯಣಗೌಡ, ಕೆ.ಎಸ್. ಈಶ್ವರಪ್ಪ ಸೇರಿ ಬಹುತೇಕ ಸಚಿವರು ಎರಡೂ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.
ಬಿ ಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಬಸವರಾಜ ಬೊಮ್ಮಾಯಿ ನೇತೃತ್ವದ ಹೊಸ ಸರ್ಕಾರ ರಚನೆಯಾದ ಬಳಿಕ ಮೊದಲ ಉಪಚುನಾವಣೆ ಎದುರಾಗಿದೆ. ಈ ಚುನಾವಣೆ ಬಿಜೆಪಿ ಮತ್ತು ಬಸವರಾಜ ಬೊಮ್ಮಾಯಿ ಅವರಿಗೆ ಅತ್ಯಂತ ಪ್ರಾಮುಖ್ಯ ಹಾಗೂ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಎರಡೂ ಕ್ಷೇತ್ರಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಹಾಗಾಗಿ, ಇಡೀ ಮಂತ್ರಿ ಮಂಡಲವೇ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದೆ.
ಇದರ ಜೊತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ಸದಸ್ಯರಾದ ರವಿಕುಮಾರ್, ತೇಜಸ್ವಿನಿ ರಮೇಶ್, ನಟಿ ತಾರಾ ಮತ್ತಿತರ ನಾಯಕರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ನಾವೇನು ಕಮ್ಮಿ ಇಲ್ಲವೆಂಬಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಹ ಎರಡೂ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ರಾಜಕೀಯ ಚಟುವಟಿಕೆ ಸ್ಥಗಿತಗೊಂಡಿದೆ ಎಂದೇ ಹೇಳಬಹುದು.
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೃಷ್ಣಬೈರೇಗೌಡ, ಎಚ್.ಕೆ. ಪಾಟೀಲ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್ ಸೇರಿದಂತೆ ಘಟಾನುಘಟಿ ನಾಯಕರು ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಇವರಿಗೂ ಒಂದು ರೀತಿಯ ಪ್ರತಿಷ್ಠೆಯ ಕಣವಾಗಿದೆ.
ಜೆಡಿಎಸ್ ಸಹ ಬಿರುಸಿನ ಪ್ರಚಾರದಲ್ಲಿ ತೊಡಗಿದೆ. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಸೇರಿ ಬಹುತೇಕ ನಾಯಕರು ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಇವರಿಗೆ ಸಿಂದಗಿ ಕ್ಷೇತ್ರ ಪ್ರತಿಷ್ಠೆಯ ಕಣವಾಗಿದೆ.