ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 3 ರಂದು ಉಪ ಚುನಾವಣೆ ಘೋಷಿಸಿದ್ದು, ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೊಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ, ಮತ ಚಲಾಯಿಸಲು ಎಲ್ಲ ಸಂಸ್ಥೆಗಳು - ನಿಯೋಜಕರು ಅನುವು ಮಾಡಿಕೊಡಬೇಕು. ಚುನಾವಣೆಯು ನಡೆಯುವ ಕ್ಷೇತ್ರಗಳಲ್ಲಿ ಮತ ಚಲಾಯಿಸಲು ಅರ್ಹ ಕಾರ್ಮಿಕರು ಮತದಾನ ಚಲಾಯಿಸಲು ಅನುಕೂಲವಾಗುವಂತೆ ಎಲ್ಲ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡುವಂತೆ ಆದೇಶಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ - ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ:
ಇನ್ನು ಉಪ ಚುನಾವಣೆ ನಡೆಯುತ್ತಿರುವ ಮತ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ಸಾವ್ರರ್ತಿಕ ರಜೆ ಘೋಷಿಸಿದೆ.
ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ವ್ಯಾಪ್ತಿಯ ಹೊರಗಡೆ ಕೆಲಸ ನಿರ್ವಹಿಸುತ್ತಿದ್ದು ಮತ್ತು ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತ ಮತದಾರರಾಗಿರುವವರಿಗೆ ಹಾಗೂ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ನವೆಂಬರ್ 3 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಸರ್ಕಾರ ಆದೇಶಿಸಿದೆ.