ಬೆಂಗಳೂರು: ರಾಜ್ಯಾದ್ಯಂತ ಪೌರಾಡಳಿತ, ನಗರಾಭಿವೃದ್ಧಿ ಸಂಸ್ಥೆಗಳಲ್ಲಿ ಸ್ವಂತ ನಿವೇಶನದಲ್ಲಿ ಕಟ್ಟಲಾಗಿರುವ ಕಟ್ಟಡಗಳನ್ನು ಸಕ್ರಮ ಮಾಡುವ ಪ್ರಕ್ರಿಯೆಯನ್ನು ಮುಂದಿನ ಒಂದು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.

ವಿಧಾನಸೌಧದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ನಿಯೋಗ ನಗರಾಭಿವೃದ್ಧಿ ಸಚಿವರೊಂದಿಗೆ ಸಭೆ ನಡೆಸಿ, ಜಿಲ್ಲೆಯಲ್ಲಿ ಏಕ ನಿವೇಶನ ನೋಂದಣಿ, ಕಟ್ಟಡ ಪರವಾನಗಿ, ಇ-ಖಾತಾ, ಖಾತಾ ಬದಲಾವಣೆ ಮುಂತಾದ ಸಮಸ್ಯೆಗಳನ್ನು ಬಗೆಹರಿಸಿ, ಹಲವಾರು ವರ್ಷಗಳಿಂದ ಇರುವ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.
ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಿಗದಿಪಡಿಸಲಾಗಿರುವ ಅಭಿವೃದ್ಧಿ ಶುಲ್ಕ ಕುರಿತು ಸಮಗ್ರವಾಗಿ ಚರ್ಚಿಸಿದ ಅವರು, ಈ ಸಮಸ್ಯೆಯನ್ನು ಸರಿಪಡಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಹೆಚ್ಚುವರಿ ಶುಲ್ಕವನ್ನು ಕಡಿತಗೊಳಿಸುವುದಾಗಿ ತಿಳಿಸಿದರು.

ನೆನೆಗುದಿಗೆ ಬಿದ್ದಿರುವ ನಗರ/ಪುರಸಭೆಯ ಮಾಸ್ಟರ್ ಪ್ಲಾನ್ ಯೋಜನೆಯನ್ನು ಕೂಡಲೇ ತಯಾರಿಸಲು ಸೂಚನೆ ನೀಡಿದರು. ಜೊತೆಗೆ ಮಾಸ್ಟರ್ ಪ್ಲಾನ್ ತಯಾರಿಸುವವರಿಗೆ ತಡೆ ಹಿಡಿದಿರುವ ಭೂ ಪರಿವರ್ತನೆಯ ವ್ಯವಸ್ಥೆಯನ್ನು ಮರಳಿ ಜಾರಿಗೆ ತರುವುದಾಗಿ ಸಭೆಯಲ್ಲಿ ತಿಳಿಸಿದರು.