ಬೆಂಗಳೂರು : 2018-19 ನೇ ಸಾಲಿನಲ್ಲಿ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಡಿ 2885.79 ಕೋಟಿ ರೂಪಾಯಿ ಸಾಲ ನೀಡಲಾಗಿದೆ ಎಂದು ಸಚಿವ ಸಿ. ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಉದ್ಘಾಟಿಸಿ ಅವರು ಮಾತನಾಡಿದರು. ಈ ನಿಗಮದಡಿ 10,36,581 ಮಂದಿ ಅನುಕೂಲ ಪಡೆದಿದ್ದಾರೆ ಎಂದರು.
ಗಂಗಾ ಕಲ್ಯಾಣ ಯೋಜನೆ ಪ್ರಾರಂಭವಾದಾಗಿನಿಂದ 2018 -19 ನೇ ಸಾಲಿನವರೆಗೆ 68,459 ಸಣ್ಣ ಮತ್ತು ಅತಿ ಸಣ್ಣ ರೈತರ 1,61,563.24 ಎಕರೆ ಜಮೀನಿಗೆ 729.38 ಕೋಟಿ ರೂ. ವೆಚ್ಚದಲ್ಲಿ52,104 ಕೊಳವೆ ಬಾವಿಗಳನ್ನು ಕೊರೆಸಿ ಮೋಟಾರ್ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗಿದೆ. ಇದು ನಿಗಮದ ಮಹತ್ವದ ಹೆಗ್ಗಳಿಕೆ. ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಯೋಜನೆ ಆರಂಭವಾದಾಗಿನಿಂದ ಈವರೆಗೆ 30,620 ಮಂದಿಗೆ 80 ಕೋಟಿ ರೂ. ವೆಚ್ಚದಲ್ಲಿ ಸ್ವಯಂ ಉದ್ಯೋಗಕ್ಕೆ ಸಾಲ ಹಾಗೂ ಭೂ ಖರೀದಿ ಸೇರಿದಂತೆ ನಾನಾ ಯೋಜನೆಗಳ ಮೂಲಕ ವಿವಿಧ ಸೌಲಭ್ಯ ಒದಗಿಸಲಾಗಿದೆ ಎಂದು ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ ನಿಗಮ 250 ಕೋಟಿ ರೂ. ವೆಚ್ಚದಲ್ಲಿ 27,178 ಮಂದಿಗೆ ವಿವಿಧ ಸಾಲ ಸೌಲಭ್ಯ ಒದಗಿಸುವ ಮೂಲಕ ಹಿಂದುಳಿದ ವರ್ಗಗಳ ಬಡವರ ಆರ್ಥಿಕ ಅಭಿವೃದ್ಧಿಯ ಸಂಕಲ್ಪ ಮಾಡಿದೆ. ಮುಂದಿನ ದಿನಗಳಲ್ಲಿ ಇದೇ ಮಾದರಿಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತದೆ. ಇದೀಗ ಆರ್ಯವೈಶ್ಯ ನಿಗಮ ಕೂಡ ನೂತನವಾಗಿ ಸ್ಥಾಪಿತವಾಗಿದ್ದು, ನಿಗಮ ಹಾಗೂ ನಿಗಮದ ಅಧ್ಯಕ್ಷ ಶರವಣ ಅವರಿಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸುವುದಾಗಿ ಪುಟ್ಟರಂಗಶೆಟ್ಟಿ ತಿಳಿಸಿದರು.
ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ಎ. ಶರವಣ ಮಾತನಾಡಿ, ನಮ್ಮ ಸಮುದಾಯವನ್ನು ಜಾತಿ ಪಟ್ಟಿಗೆ ಸೇರಿಸುವ ಕಾರ್ಯ ಯಶಸ್ವಿಯಾಗಿದೆ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ನಮ್ಮ ಸಮುದಾಯದಲ್ಲಿ ಎಲ್ಲರೂ ಶ್ರೀಮಂತರಿಲ್ಲ ಎಂದರು. ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ಅನ್ನದಾನಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.