ಬೆಂಗಳೂರು : ರಾಜ್ಯದಲ್ಲಿ ಮತ್ತೆ 15 ದಿನಗಳ ಕಾಲ ಕೊರೊನಾ ಲಾಕ್‌ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದೆ.
ಕೊರೊನಾ ಸೋಂಕು ತಡೆಗೆ ಲಾಕ್‌ಡೌನ್ ವಿಸ್ತರಣೆ ಅನಿವಾರ್ಯ ಎಂಬ ಅಭಿಪ್ರಾಯವನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡುವ ಮುನ್ಸೂಚನೆಯನ್ನು ಸಿಎಂ ಬಿಎಸ್ವೈ ನೀಡಿದ್ದಾರೆ. ಇಂದು ಸಚಿವ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ ಸಿಎಂ ಬಿ ಎಸ್ ಯಡಿಯೂರಪ್ಪ, ಲಾಕ್‌ಡೌನ್ 15 ದಿನ ವಿಸ್ತರಿಸಲು ಸಂಪುಟದ ಎಲ್ಲಾ ಸದಸ್ಯರು ಒತ್ತಾಯ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಚರ್ಚಿಸಿ ಏಪ್ರಿಲ್ 11ರಂದು ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
ಜನತೆ ಮನೆಯಿಂದ ಹೊರ ಬರದೆ ಸಹಕರಿಸಬೇಕು. ಇಲ್ಲವಾದಲ್ಲಿ ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದರು. ಬೆಂಗಳೂರಿನಲ್ಲಿ ಲಾಕ್‌ಡೌನ್ ಉಲ್ಲಂಘಿಸಿದವರ ಸುಮಾರು 10 ಸಾವಿರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜನತೆ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ತೀರ್ಮಾನ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.
ಕೆಲ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಬೇಕಿದೆ. ಇಂದು ಸಂಜೆಯೊಳಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಾಗುವುದು ಎಂದು ತಿಳಿಸಿದರು. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜತೆ ಚರ್ಚೆ ಮಾಡಲಾಗಿದೆ. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಎಚ್ಚರ ವಹಿಸಲಾಗಿದೆ. ಮಳೆ ಆರಂಭವಾಗಿರುವುದರಿಂದ ರೈತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. ಲಾಕ್ಡೌನ್ನಿಂದ ನಷ್ಟಕ್ಕೊಳಗಾಗಿರುವ ಹೂವಿನ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಲಾಗುವುದು. ರಾಜ್ಯದಲ್ಲಿ ಯಾರೊಬ್ಬರೂ ಸಹ ಹಸಿವಿನಿಂದ ಇರಬಾರದು, ಈ ನಿಟ್ಟಿನಲ್ಲಿ ಎಲ್ಲ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ರು.