ಬೆಂಗಳೂರು: ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಅವರು ರಾಜ್ಯದ ಬಂಡವಾಳ ಹೂಡಿಕೆ ಆಕರ್ಷಣೆಗೆ ಪೂರಕವಾಗುವಂತಹ ಕೈಗಾರಿಕಾ ನೀತಿಯನ್ನು ಘೋಷಿಸಿದ್ದಾರೆ. ದೇಶದ ಬೇರೆ ರಾಜ್ಯಗಳ ಕೈಗಾರಿಕಾ ನೀತಿಗಳಿಗೆ ಹೋಲಿಸಿದಲ್ಲಿ ಕರ್ನಾಟಕದ ಕೈಗಾರಿಕಾ ನೀತಿ ವಿಭಿನ್ನವಾಗಿದ್ದು, ಬಂಡವಾಳ ಹೂಡಿಕೆಗೆ ಸಹಾಯಧನವೂ ವಹಿವಾಟಿನ ಆಧಾರದ ಮೇಲೆ ಎಲ್ಲಾ ರೀತಿಯ ಕೈಗಾರಿಕೆಗಳಿಗೆ ಲಭ್ಯವಾಗುವುದೆಂದು ಸಚಿವರು ತಿಳಿಸಿದ್ದಾರೆ. ಈ ವಿಷಯವನ್ನು ತಿಳಿದು ಸಂತೋಷವಾಗಿದೆ. ಸಚಿವ ಸಂಪುಟದ ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ಸಿ.ಆರ್. ಜನಾರ್ಧನ್ ಹೇಳಿದ್ದಾರೆ.
ಇದನ್ನೂ ಓದಿ: ಹೊಸ ಕೈಗಾರಿಕಾ ನೀತಿ, ಕೈಗಾರಿಕಾ ಕಾಯ್ದೆ ತಿದ್ದುಪಡಿಗೆ ಸಂಪುಟ ಒಪ್ಪಿಗೆ
ಇದೇ ಸಂದರ್ಭದಲ್ಲಿ ಮಾತನಾಡಿದ ಸಿ.ಆರ್. ಜನಾರ್ಧನ್, ಇಂತಹ ಕಠಿಣ ಸಂದರ್ಭದಲ್ಲಿ ರಾಜ್ಯವು ನೂತನ ಕೈಗಾರಿಕಾ ನೀತಿಯನ್ನು ಜಾರಿಗೊಳಿಸಿರುವುದರಿಂದ, ದೇಶ ವಿದೇಶಗಳಿಂದ ಬಂಡವಾಳ ಆಕರ್ಷಣೆ ಮಾಡಲು ಹಾಗೂ ಮುಂದಿನ ಸಾಲಿನಲ್ಲಿ ಆಯೋಜಿಸಲು ಉದ್ದೇಶಿಸಿರುವ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಭದ್ರ ಅಡಿಪಾಯವಾಗಲಿದೆ. ಇದಕ್ಕಾಗಿ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಕೈಗಾರಿಕಾ ಸಚಿವರಿಗೆ ಎಫ್‌ಕೆಸಿಸಿಐ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು.