ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದ ಆರೋಪದಡಿ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ನ್ಯಾಯಾಲಯ ರದ್ದುಪಡಿಸಿ ಆದೇಶಿಸಿದೆ.
ಈ ಪ್ರಕರಣ ರದ್ದು ಕೋರಿ ಸಂಸದ ಅನಂತ್ ಕುಮಾರ್ ಹೆಗಡೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ತ್ಯಾಗರಾಜ ಎನ್.ಇನವಳ್ಳಿ, ಆರೋಪಕ್ಕೆ ಸೂಕ್ತ ಸಾಕ್ಷ್ಯಾಧಾರ ಲಭ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಪ್ರಕರಣ ರದ್ದುಪಡಿಸಿ ಆದೇಶಿಸಿದ್ದಾರೆ.
ಪ್ರಕರಣದ ಹಿನ್ನೆಲೆ
2016ರ ಫೆಬ್ರವರಿ 28 ರಂದು ಶಿರಸಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ್ದ ಸಂಸದ ಅನಂತ್ ಕುಮಾರ್ ಹೆಗಡೆ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಇಡೀ ದೇಶದ ಭಯೋತ್ಪಾದಕ ಕೇಂದ್ರವಾಗಿದೆ ಎಂಬ ವಿವಾದಿತ ಹೇಳಿಕೆ ನೀಡಿದ್ದರು.
ಈ ಸಂಬಂಧ ಹೆಗಡೆ ವಿರುದ್ಧ ಸ್ಥಳೀಯ ಮುರಾದ್ ಹುಸೇನ್ ಎಂಬುವರು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.