ಬೆಂಗಳೂರು: ಕಾವೇರಿ ನದಿ ನೀರು ವಿವಾದ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಲು ನಿರಾಕರಿಸಿದ್ದು ರಾಜ್ಯದಲ್ಲಿ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ಮಂಡ್ಯ, ಮೈಸೂರು ಭಾಗದಲ್ಲಿ ರೈತಪರ, ಕನ್ನಡಪರ ಸಂಘಟನೆಗಳ ಹೋರಾಟಗಾರರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾವೇರಿ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಮುಂಜಾಗೃತಾ ಕ್ರಮವಾಗಿ ಬೆಂಗಳೂರಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ತಮಿಳಿಗರು ವಾಸಿಸುತ್ತಿರುವ ಕೆಲವು ಪ್ರದೇಶಗಳಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗುತ್ತಿದೆ.
15 ದಿನಗಳ ಕಾಲ ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿದ್ದ ಆದೇಶ ಎತ್ತಿ ಹಿಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿಲುವು ಪ್ರಶ್ನಿಸಿ ಕರ್ನಾಟಕ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಗುರುವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಾಧಿಕಾರದ ಆದೇಶವನ್ನು ಪಾಲಿಸುವಂತೆ ಸೂಚಿಸಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಹಾಗಾಗಿ ತಮಿಳುನಾಡಿಗೆ ನೀರು ಹರಿಸಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಕನ್ನಡಪರ ಹೋರಾಟಗಾರರು ಮತ್ತು ರೈತಪರ ಸಂಘಟನೆಗಳು ಪ್ರತಿಭಟನೆ ಕೈಗೊಂಡಿವೆ. ಸೆ.23 (ನಾಳೆ) ರಂದು ಮಂಡ್ಯ ಜಿಲ್ಲೆ ಬಂದ್ಗೂ ಸಂಘಟನೆಗಳು ಕರೆ ನೀಡಿವೆ.
ಬೆಂಗಳೂರಿನಲ್ಲೂ ಕಾವೇರಿ ಪ್ರತಿಭಟನೆ ನಡೆಯತ್ತಿರುವುದರಿಂದ ಪೊಲೀಸ್ ಕಮಿಷನರ್ ಬಿ.ದಯಾನಂದ್ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ. ಇದೇ ವೇಳೆ, ತಮಿಳಿಗರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತೆ ಒದಗಿಸಲು ಡಿಸಿಪಿಗಳಿಗೆ ನಿರ್ದೇಶನ ನೀಡಿದ್ದಾರೆ. ಈಗಾಗಲೇ ನಗರದಾದ್ಯಂತ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಪ್ರತಿಭಟನೆ ಮತ್ತು ರಸ್ತೆ ತಡೆ ನಡೆಸುತ್ತಿರುವ ಸಂಘಟನೆಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. 1991 ರಲ್ಲಿ ಕಾವೇರಿ ವಿಚಾರವಾಗಿ ಬೆಂಗಳೂರು, ಮೈಸೂರು ನಗರಗಳಲ್ಲಿ ವ್ಯಾಪಕ ಹಿಂಸಾಚಾರ ನಡೆದಿದ್ದವು. ಕರ್ನಾಟಕದಿಂದ ನೀರು ಬಿಡುವಂತೆ ನ್ಯಾಯಾಲಯದ ಆದೇಶವನ್ನು ವಿರೋಧಿಸಿ ಪ್ರತಿಭಟನೆಗಳು ನಡೆದಿದ್ದವು. ಈ ಘರ್ಷಣೆಯಲ್ಲಿ ಗುಂಡಿನ ದಾಳಿ ನಡೆದು 16 ಮಂದಿ ಸಾವನ್ನಪ್ಪಿದ್ದರು.
ಇಂದು ಸಂಜೆ ಸಂಪುಟ ಸಭೆ: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ರಾಜ್ಯ ಸರ್ಕಾರದ ಮೇಳೆ ಒತ್ತಡ ಹೇರುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಂಜೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಪ್ರಮುಖವಾಗಿ ಕಾವೇರಿ ಬಿಕ್ಕಟ್ಟಿನ ಬಗ್ಗೆ ಚರ್ಚೆಯಾಗಲಿದೆ. (ಐಎಎನ್‌ಎಸ್)
ಇದನ್ನೂ ಓದಿ: ಇಂದು ಸಂಜೆ ಮಹತ್ವದ ಸಚಿವ ಸಂಪುಟ ಸಭೆ: ಕಾವೇರಿ ಬಿಕ್ಕಟ್ಟು ಚರ್ಚೆ, ಮುಂದಿನ ನಡೆ ಬಗ್ಗೆ ತೀರ್ಮಾನ